ಸುದ್ದಿಮೂಲ ವಾರ್ತೆ
ತುಮಕೂರು,ಸೆ.14: 2023-24ನೇ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ತುಮಕೂರು ಜಿಲ್ಲೆಯ 10 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ತಿಳಿಸಿದರು.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ಶಿರಾ, ತಿಪಟೂರು, ತುರುವೇಕೆರೆ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ ತುಮಕೂರು ತಾಲ್ಲೂಕನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ರಾಜ್ಯ ಸರ್ಕಾರವು ಘೋಷಿಸಿರುತ್ತದೆ ಎಂದು ಅವರು ತಿಳಿಸಿದರು.
ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ-2020ರ ಬರಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆ ವರದಿಯನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದ್ದು, ಈ ಪೈಕಿ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ಲ್ಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳವರೆಗೆ ಅಥವಾ ಮುಂದಿನ ಆದೇಶದವರೆಗೆ ಸರ್ಕಾರ ಘೋಷಿಸಿದೆ.