ಸುದ್ದಿಮೂಲ ವಾರ್ತೆ
ಬೆಂಗಳೂರು, ಮಾ.21: ಹಿಂದುತ್ವದ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿದ ಆರೋಪದ ಮೇಲೆ ನಟ ಚೇತನ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಹಿಂದುತ್ವದ ಕುರಿತಂತೆ ಚೇತನ್ ಅವರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವರು ಅವರ ವಿರುದ್ಧ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಸದಾಶಿವನಗರ ಪೊಲೀಸರು ಮಂಗಳವಾರ ಬೆಳಗ್ಗೆ ಅವರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಲಯದ ಮುಂದೆ ಚೇತನ್ ಅವರನ್ನು ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದ ನಟ ಚೇತನ್ ಅದರಲ್ಲಿ ‘ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದರು. ಇದನ್ನು ಖಂಡಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿತ್ತು.