ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.28: ಬೆಂಗಳೂರು ನಗರ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,15,109 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ಮಾಹಿತಿ ನೀಡಿದರು.
ಇದರಲ್ಲಿ 50,24,775 ಪುರುಷ, 46,86,813 ಮಹಿಳೆ, 1,761 ಇತರೆ, 1,760 ಸೇವಾ ಮತದಾರರಿದ್ದಾರೆ. ನಗರದಲ್ಲಿ 1,43,526 ಯುವ ಮತದಾರಿದ್ದು, ಈ ಬಾರಿ ಯುವ ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು.
ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಕುರಿತು ಇಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಸಂಪೂರ್ಣ ವಿವರಣೆ ನೀಡಿದರು.
80ಕ್ಕೂ ಹೆಚ್ಚಿನ ವಯಸ್ಸಿನ ಮತದಾರರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 29 ರಿಂದ ಮೇ 6ನೇ ತಾರೀಖಿನವರೆಗೂ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಚುನಾವಣಾಧಿಕಾರಿಗಳ ಮುಖಾಂತರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ನಮ್ಮ ನಡೆ ಮತಗಟ್ಟೆಯ ಕಡೆ:
ವಿಧಾನಸಭೆ ಚುನಾವಣೆ ಅಂಗವಾಗಿ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಏಕ ಕಾಲಕ್ಕೆ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲು ಚುನಾವಣಾ ಆಯೋಗದ ಸುತ್ತೋಲೆಯಂತೆ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಸ್ತುತ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದ್ದು, ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮವನ್ನು ಏಪ್ರಿಲ್ 30 ರಂದು ಬೆಳಗ್ಗೆ 8:00 ಗಂಟೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಪ್ರಾಥಮಿಕವಾಗಿ ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ, ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರು ನಗರ ಜಿಲ್ಲೆಯಾದ್ಯಾಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗುತ್ತದೆ.