ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.4: ಪ್ರಸ್ತುತ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರ ಸ್ವಾಮಿ ಸ್ವರ್ಧಿಸಲಿದ್ದಾರೆ ಎಂಬ ಮಾಹಿತಿಯು ಸುಳ್ಳು ಎಂದು ಅನಿತಾಕುಮಾರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಯು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ರಾಮನಗರ ಕ್ಷೇತ್ರವನ್ನು ಪುತ್ರ ನಿಖಿಲ್ ಕುಮಾರಸ್ವಾಮಿಗೆ ಬಿಟ್ಟುಕೊಟ್ಟಿದ್ದೇನೆ. ಪುನಃ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್ ಕಮಲದ ಉಪ ಚುನಾವಣೆಯಲ್ಲಿ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ ಎಂದು ಅವರು ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.
ನಂತರದ ಚುನಾವಣೆಯಲ್ಲಿ ಶ್ರೀ ವೀರಭದ್ರಯ್ಯ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ. 2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ ಈ ಕ್ಷೇತ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದಿದ್ದಾರೆ.
ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ಎಂದು ಟ್ವಿಟರ್ ಮೂಲಕ ಸಂದೇಶ ನೀಡಿದ್ದಾರೆ.