ಸುದ್ದಿಮೂಲ ವಾರ್ತೆ
ಬೆಂಗಳೂರು, ಏ. 5: ಕರ್ನಾಟಕ ಗಡಿಯೊಳಗಿನ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಹಿತ ರಾಜ್ಯದ ನಾಯಕರು ಪಕ್ಷಾತೀತವಾಗಿ ಖಂಡಿಸಿದ್ದಾರೆ.
ಕರ್ನಾಟಕ- ಮಹಾರಾಷ್ಟ್ರ ಗಡಿ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯಲ್ಲಿರುವ ಮಧ್ಯೆಯೇ ಮಹಾರಾಷ್ಟ್ರದ ಏಕನಾಥ್ ಸಿಂಧೆ ಸರ್ಕಾರ ಕರ್ನಾಟಕದ ಗಡಿಯೊಳಗಿನ ಗ್ರಾಮಗಳಿಗೆ ‘ಮಹಾತ್ಮ ಜ್ಯೋತಿರಾವ್ ಪುಲೆ ಜನಾರೋಗ್ಯ ಯೋಜನೆ’ ಜಾರಿ ಮಾಡಿ ಆದೇಶಸಿದೆ. ಇದು ಕರ್ನಾಟಕದವರ ಕೆಂಗಣ್ಣಿಗೆ ಗುರಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಡೃ ಸರ್ಕಾರ ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದನ್ನು ಖಂಡಿಸಿರುವ ಅವರು, ಕರ್ನಾಟಕದ ಗಡಿಯಲ್ಲಿ ಇರುವವರಿಗೆ ಮಹಾರಾಷ್ಟ್ರ ಸರ್ಕಾರ ವಿಮೆ ಜಾರಿ ಮಾಡಿರುವುದು ಉದ್ದಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು. ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಜ್ಯೋತಿರಾವ್ ಫುಲೆ ಜನ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ.
ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆಗೆ ಗೌವರ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು. ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಪರಿಣಾಮ ನೆಟ್ಟಗಾಗದು: ಸಿದ್ದರಾಮಯ್ಯ
ಕನ್ನಡಿಗರ ತೀವ್ರ ವಿರೋಧಧ ಹೊರತಾಗಿಯೂ ರಾಜ್ಯದ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದ್ದು. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೆ ಇದ್ದರೆ ಪರಿಣಾಮ ನೆಟ್ಟಗಾಗದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭರವಸೆ ನೀಡಿದ್ದರು. ಇವರಿಬ್ಬರ ಮಾತಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಕವಡೆ ಕಾಸಿನ ಕಿಮ್ಮತ್ತು ಕೊಟ್ಟಿಲ್ಲ. ರಾಜ್ಯದ ಗಡಿಯೊಳಗೆ ಆರೋಗ್ಯ ವಿಮೆ ಜಾರಿಗೆ ಮಹಾರಾಷ್ಟ್ರ ಸರ್ಕಾರ ಯತ್ನಿಸಿದಾಗಲೇ ನಾವು ವಿರೋಧಿಸಿದ್ದೆವು. ಅಲ್ಲಿಯ ವರೆಗೆ ತೆಪ್ಪಗಿದ್ದ ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಒತ್ತಡಕ್ಕೆ ಮಣಿದು ವೀರಾವೇಶದ ಮಾತುಗಳನ್ನಾಡಿದ್ದರು. ಆ ಆವೇಶ, ಬದ್ಧತೆಯನ್ನು ತೋರಿಸಬೇಕಾದ ಕಾಲ ಈಗ ಬಂದಿದೆ ಎಂದಿದ್ದಾರೆ.
ಗಡಿ ವಿವಾದ ಇತ್ಯರ್ಥಗೊಳ್ಳುವ ವರೆಗೆ ಎರಡೂ ರಾಜ್ಯಗಳು ವಿವಾದವನ್ನು ಕೆದಕಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಕೀತು ಮಾಡಿ ಎರಡೂ ರಾಜ್ಯಗಳ ಸದಸ್ಯರನ್ನೊಳಗೊಂಡ ಸಲಹಾ ಸಮಿತಿ ರಚಿಸಿದ್ದರು. ಆ ಸೂಚನೆಯನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಧಿಕ್ಕರಿಸಿದ್ದಾರೆ. ಬೆಳಗಾವಿ ಗಡಿವಿವಾದ ನ್ಯಾಯಾಲಯದ ಕಟಕಟೆಯಲ್ಲಿದೆ. ಕನ್ನಡಿಗರಿಗೆ ನ್ಯಾಯ ಸಿಗುತ್ತದೆ ಎನ್ನುವ ಭರವಸೆ ನಮಗೆ ಇದೆ. ಈ ನಡುವೆ ರಾಜಕೀಯ ಲಾಭದ ದುರುದ್ದೇಶದಿಂದ ಮಹಾರಾಷ್ಟ್ರ ಆಗಾಗ ಗಡಿತಂಟೆಯನ್ನು ಕೆದಕುವ ಕಿಡಿಗೇಡಿತನ ಮಾಡುವುದು ಖಂಡನೀಯ. ಕನ್ನಡಿಗರು ಇದನ್ನು ಸಹಿಸುವುದಿಲ್ಲ ಎಂದಿದ್ದಾರೆ.
ಒಕ್ಕೂಟ ವ್ಯವಸ್ಥೆ ಅವಸಾನಕ್ಕೆ ಕಾರಣವಾದೀತು: ಎಚ್ಡಿಕೆ
ರಾಜ್ಯದ ಗಡಿ ಹಳ್ಳಿಗಳ ಜನರಿಗೆ ವಿಮಾ ಯೋಜನೆ ಜಾರಿ ಮಾಡುವ ಮಹಾರಾಷ್ಟ್ರ ಸರಕಾರದ ವಿವಾದಾಸ್ಪದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದ ನಡೆ ಹಾಗೂ ಕೇಂದ್ರ ಸರಕಾರದ ಮೌನ ಒಕ್ಕೂಟ ವ್ಯವಸ್ಥೆಯ ಒಡಕಿಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದಲ್ಲಿರುವ ಬಿಜೆಪಿ ಡಬಲ್ ಎಂಜಿನ್ ಸರಕಾರ ಪದೇ ಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ. ಚೀನಾ ಮನಸ್ಥಿತಿಯ ಆ ರಾಜ್ಯವು ಕರ್ನಾಟಕವನ್ನು ಶತ್ರು ದೇಶದಂತೆ ನೋಡುತ್ತಿದೆ. ಕೇಂದ್ರ ಬಿಜೆಪಿ ಸರಕಾರ ಇದೆಲ್ಲಾ ನೋಡಿಕೊಂಡು ಮೌನವಾಗಿದೆ, ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಇದೇ ಕಾರಣವಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಭಾರತ ಸ್ವತಂತ್ರ್ಯಗೊಂಡಾಗ ಎಲ್ಲರಿಗಿಂತ ಮೊದಲೇ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟವರು ನಾವು. ನಮ್ಮ ಉದಾರತೆಯೇ ನಮಗೆ ಇಂದು ಮುಳುವಾಗಿದೆಯಾ? ನೆಲ, ಜಲ, ಭಾಷೆ, ಅನುದಾನ ಸೇರಿ ಪ್ರತಿ ವಿಷಯದಲ್ಲೂ ಕನ್ನಡಿಗರು ಮಲತಾಯಿ ಮಕ್ಕಳಾಗಿದ್ದಾರೆ! ಇನ್ನೆಷ್ಟು ದಿನ ಈ ಅನ್ಯಾಯ? ಎಂದು ಅವರು ಕೇಳಿದ್ದಾರೆ.