ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.3: ರಾಯಚೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಆಭ್ಯಥಿ ಆಯ್ಕೆಗೆ ಸಂಬಂಧಪಟ್ಟಂತೆ ಪೈಪೋಟಿ ಮುಂದುವರಿದಿದೆ. ಹಾಲಿ ಶಾಸಕ ಡಾ. ಶಿವರಾಜ್ ಪಾಟೀಲ್ ಅವರಿಗೆ ಬಹುತೇಕ ಟಿಕೆಟ್ ಖಚಿತ ಎನ್ನುವ ಮಧ್ಯೆಯೇ ಇತ್ತೀಚಿನ ಅವರ ಮೋದಿ ಕುರಿತು ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಡಾ. ಶಿವರಾಜ್ ಪಾಟೀಲ್ ಅವರ ಹೆಸರು ಅಂತಿಮಗೊಳಿಸುವುದು ವಿಳಂಬವಾಗುತ್ತಿದೆ.
ಕಳೆದ ಎರಡು ದಿನಗಳ ಹಿಂದೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಯಚೂರು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಭ್ಯಾವ್ಯ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಆದರೆ, ರಾಯಚೂರು ಮತ್ತು ಲಿಂಗಸಗೂರು ಕ್ಷೇತ್ರಗಳಿಗೆ ಹೆಸರು ಅಂತಿಮಗೊಳಿಸಿಲ್ಲವಾದ್ದರಿಂದ ಈ ಮಧ್ಯೆ ರಾಯಚೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ಗಾಗಿ ಡಾ. ಬಸನಗೌಡ, ಗುಡಿಸಿ ನರಸರೆಡ್ಡಿ ತೀವ್ರ ಪೈಪೋಟಿ ವೊಡ್ಡಿದ್ದಾರೆ.
ಭಾನುವಾರ ಗಂಗಾವತಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ರಾಯಚೂರಿನ ಮಾಜಿ ಶಾಸಕ ಎ. ಪಾಪಾರೆಡ್ಡಿ ನೇತೃತ್ವದಲ್ಲಿ ಭೇಟಿ ಮಾಡಿ, ಗುಡಸಿ ನರಸರೆಡ್ಡಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಡ ತಂದಿದ್ದು, ಇಂದು ಸಹ ಬೆಂಗಳೂರಿಗೆ ಆಗಮಿಸಿದ ಅದೇ ತಂಡ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.
ಈ ಮಧ್ಯೆ ಡಾ. ಬಸನಗೌಡ ಸಹ ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿಯೇ ಬೀಡುಬಿಟ್ಟಿದ್ದು ಟಿಕೆಟ್ಗಾಗಿ ತಮ್ಮದೇ ಆದ ರೀತಿಯಲ್ಲಿ ಪ್ರಯತ್ನ ಮುಂದುವರಿಸಿದ್ದಾರೆ. ಅಚ್ಚರಿ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ ಬಸನಗೌಡ ಬ್ಯಾಗ್ವಾಟ್ ಸಹ ರಾಯಚೂರು ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಈ ಎಲ್ಲಾ ಬೆಳವಣಿಗೆ ಮಧ್ಯೆ ನಾಳೆ ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ರಾಯಚೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕುರಿತು ತೀರ್ಮಾನವಾಗುವ ಸಾಧ್ಯತೆಯಿದೆ.