ಸುದ್ದಿಮೂಲ ವಾರ್ತೆ ,
ಬೆಂಗಳೂರು: ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ ಮೂರು ಗಂಟೆಯಲ್ಲಿ ಮಿಂಚು-ಗುಡುಗು ಸಮೇತ ಹಾವೇರಿ, ಕೊಪ್ಪಳ ಭಾಗದಲ್ಲಿ ತಕ್ಕ ಮಟ್ಟಿನ ಮಳೆ ಸುರಿಯಲಿದೆ ಎಂದು ಸೂಚನೆ ನೀಡಲಾಗಿದೆ. ಇನ್ನೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದರೊಂದಿಗೆ ಜಿಲ್ಲಾಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಇಂದು ಮಧ್ಯಾಹ್ನದ ವೇಳೆಗೆ ಕೊಪ್ಪಳ ನಗರ ಸೇರಿದಂತೆ ಆನೆಗೊಂಡಿ, ಸಾಣಾಪುರ ಹಲವು ಭಾಗಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಕಡೆ ವರುಣ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇಂದು ಕೂಡ ರಾಜ್ಯದ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಆದರೆ ಏಪ್ರಿಲ್ 9 ಮತ್ತು 10ರಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.