ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.7: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧ ನವದೆಹಲಿಯಲ್ಲಿ ಏ.8ರಂದು ಶನಿವಾರ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಈಗಾಗಲೇ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಜೆಡಿಎಸ್ ಈಗಾಗಲೇ 93 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಖೈರುಗೊಳಿಸಿದೆ. ಆಡಳಿತಾರೂಢ ಬಿಜೆಪಿ ಮಾತ್ರ ಇನ್ನೂ ತನ್ನ ಅಭ್ಯರ್ಥಿಗಳು ಯಾರು ಎಂದು ಬಿಡುಗಡೆ ಮಾಡದಿರುವುದು ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಶೀಘ್ರವಾಗಿ ಪಟ್ಟಿ ಬಿಡುಗಡೆ ಮಾಡುವ ಸಂಬಂಧ ಸಂಸದೀಯ ಮಂಡಳಿ ಸಭೆ ನಡೆಯಲಿದೆ.
ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿಗಳಾಗಬೇಕು ಎಂಬ ವಿಷಯವಾಗಿ ಎರಡು ದಿನಗಳ ಜಿಲ್ಲಾ ಕೋರ್ ಕಮಿಟಿ ಸಭೆ ಮತ್ತು ಎರಡು ದಿನಗಳ ರಾಜ್ಯ ಮಟ್ಟದ ಕೋರ್ಕಮಿಟಿ ಸಭೆ ನಡೆಸಿ ರಾಜ್ಯದ 224 ಕ್ಷೇತ್ರಗಳಿಗೂ ಸಹ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ. ಆದರೆ, ಯಾವುದೇ ಗೊಂದಲ ಇಲ್ಲದ ಒಂದು ಕ್ಷೇತ್ರಕ್ಕೆ ಒಂದೇ ಹೆಸರು ಸೂಚಿಸಲಾದ 102 ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ನಾಮಪತ್ರ ಸಲ್ಲಿಕೆ ಆರಂಭವಾದ ಬಳಿಕ ಪೂರ್ಣಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಯಾರು ಯಾರು ಭಾಗಿ?
ದೆಹಲಿನಲ್ಲಿ ನಡೆಯುವ ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಮತ್ತು ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರು ಭಾಗವಹಿಸಲಿದ್ದಾರೆ. ಈ ನಾಯಕರು ರಾಜ್ಯದ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಕರ್ನಾಟಕ್ಕೆ ಭೇಟಿ ನೀಡಲಿದ್ದಾರೆ. ಏ.8 ಮತ್ತು9ರಂದು ಕರ್ನಾಟಕ ಪ್ರವಾಸ ಇದೆ. ಅವರು ದೆಹಲಿಗೆ ಮರಳಿದ ಬಳಿಕ ಏ.10ರಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಯಾರು ಯಾರಿಗೆ ಟಿಕೆಟ್?
ಇನ್ನು ಬಿಜೆಪಿ ಟಿಕೆಟ್ ಯಾರಿಗೆ ಧಕ್ಕಲಿದೆ, ಯಾರು ಯಾರಿಗೆ ಕೈತಪ್ಪಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಶಿಕಾರಿಪುರದ ಟಿಕೆಟ್ ವಿಜಯೇಂದ್ರ ಅವರಿಗೆ ನೀಡಬೇಕು ಎಂದು ಹೇಳಿದ್ದಾರೆ. ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದ್ದು, ಅವರ ಪುತ್ರ ಕಾಂತೇಶ್ ಅವರಿಗಾದರೂ ಟಿಕೆಟ್ ಸಿಗಲಿ ಎಂದು ಪ್ರಯತ್ನ ಪಡುತ್ತಿದ್ದಾರೆ. ಮತ್ತೊಂದೆಡೆ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿಯಲ್ಲೇ ಇದ್ದ ಆಯನೂರು ಮಂಜುನಾಥ್ ಬಂಡೆದ್ದಾರೆ. ಹಾಲಾಡಿ ಶ್ರೀನಿವಾಸ ಶೆಟ್ಟಿ, ಎಸ್.ಎ. ರವೀಂದ್ರನಾಥ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಅಲ್ಲಿ ಯಾರಿಗೆ ಟಿಕೆಟ್ ನೀಡುತ್ತರೆ ಎಂಬುದು ಕುತೂಹಲ ಮೂಡಿಸಿದೆ.
ಲೋಕಾಯುಕ್ತ ಲಂಚ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಪಿಎಸ್ಐ ಲಂಚ ಹಗರಣದ ಆರೋಪ ಎದರಿಸುತ್ತಿರುವ ಬಸವರಾಜ ದಡೇಸೂಗೂರು, ಭ್ರಷ್ಟಾಚಾರದ ಆರೋಪ ಎದಿರುಸತ್ತಿರುವ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರಿಗೆ ಮತ್ತೆ ಟಿಕೆಟ್ ಸಿಗಲಿದೆಯೇ ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿದೆ.
ಅದೇ ರೀತಿಯಲ್ಲಿ ವಲಸಿಗ ಶಾಸಕರಾದ ಅಥಣಿಯ ಮಹೇಶ್ ಕುಮಟಳ್ಳಿ ಹಾಗೂ ಕಾಗವಾಡದಲ್ಲಿ ಶ್ರೀಮಂತ ಪಾಟೀಲ್ ವಿಚಾರವಾಗಿ ಪಕ್ಷದ ತೀರ್ಮಾನ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಅಥಣಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಅಥಣಿಯಲ್ಲಿ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.
ಶಿಕಾರಿಪುರದಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ, ಶಿವಮೊಗ್ಗ ನಗರದಲ್ಲಿ ಈಶ್ವರಪ್ಪ ಪುತ್ರ ಕಾಂತೇಶ್, ಮುಧೋಳದಲ್ಲಿ ಗೋವಿಂದ ಕಾರಜೋಳನ ಪುತ್ರ ಉಮೇಶ್ ಕಾರಜೋಳ, ಚಿತ್ರದುರ್ಗದಲ್ಲಿ ತಿಪ್ಪಾರೆಡ್ಡಿ ಮಗ ಡಾ. ಸಿದ್ಧಾರ್ಥ್ ಸಹಿತ ಹಾಲಿ ಶಾಸಕರ ಪುತ್ರರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಪಕ್ಷದ ಸಂಸದೀಯ ಮಂಡಳಿ ಸಭೆ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು.