ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.15: ಲಂಚ ಪ್ರಕರಣದಲ್ಲಿಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಪಡೆದ ನಂತರ ಮೂರು ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ. ಇದರ ಜೊತೆಗೆ ಹೊರದೇಶಗಳಿಗೆ ತೆರಳದಂತೆ ಪಾಸ್ಪೋರ್ಟ್ ಕೋರ್ಟ್ ಅಧೀನಕ್ಕೆ ನೀಡಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ, 5 ಲಕ್ಷ ರೂ. ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚನೆ ನೀಡಲಾಗಿದೆ.
ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಬೆಂಗಳೂರು ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ತಂದೆ ಅಧ್ಯಕ್ಷರಾಗಿರುವಂತಹ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ. ಲೋಕಾಯುಕ್ತ ದಾಳಿ ವೇಳೆ ಕಂತೆ ಕಂತೆ ನೋಟುಗಳು ಪತ್ತೆಯಾಗಿದ್ದವು. ಆಗ ಪ್ರಶಾಂತ್ನನ್ನು ಬಂಧಿಸಿದ್ದ ಪೊಲೀಸರು ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿ ಮಾಡಿದ್ದರು.
ಇತ್ತ ಮಾಡಾಳ್ ವಿರೂಪಾಕ್ಷಪ್ಪ ಜೈಲು ಸೇರಿದ್ದ ಹಿನ್ನೆಲೆ ಪುತ್ರ ಮಲ್ಲಿಕಾರ್ಜುನ್ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂಬ ಒತ್ತಡ ಕೇಳಿ ಬಂದಿತ್ತು. ಆದರೆ ಚನ್ನಗಿರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಶಿವಕುಮಾರ್ ಅವರಿಗೆ ನೀಡಲಾಗಿದೆ.
ಟಿಕೆಟ್ ತಪ್ಪಿದ ಹಿನ್ನೆಲೆ ಮಲ್ಲಿಕಾರ್ಜುನ್ ಮಾಡಾಳ್ ಪಕ್ಷೇತರರಾಗಿ ನಿಲ್ಲುವಂತೆ ಅಭಿಮಾನಿಗಳು ಒತ್ತಡ ಹಾಕಿ ದ್ದರು. ಇದೀಗ ವಿರೂಪಾಕ್ಷಪ್ಪ ಅವರಿಗೆ ಜಾಮೀನು ಸಿಕ್ಕು ಜೈಲಿನಿಂದ ಹೊರಬಂದಿರುವುದರಿಂದ ಚೆನ್ನಗಿರಿ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆ ಆಗುವ ಸಾಧ್ಯತೆಗಳಿವೆ.