ಸುದ್ದಿಮೂಲ ವಾರ್ತೆ
ತುಮಕೂರು, ಏ.18: ಗೊಲ್ಲಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಶಿಬಿರವನ್ನು ಶಾಲೆಯ 17ನೇ ಬ್ಯಾಚ್ ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿತ್ತು.
ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಜಿ.ಬೀನಾ ಅವರು ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.
ನವೋದಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿ ಪ್ರಸ್ತುತ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರು, ತಾಲ್ಲೂಕು ಆರೋಗ್ಯ ಇಲಾಖೆಯ ಶುಶ್ರೂಷಕಿಯರು ಮತ್ತು ಸಿಬ್ಬಂದಿಗಳು, ತುಮಕೂರಿನ ಟಿಹೆಚ್ಎಸ್ ಆಸ್ಪತ್ರೆ, ಅಗರ್ವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯರು, ಸಹಾಯಕ ಸಿಬ್ಬಂದಿಯೊಂದಿಗೆ 450ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಾಮಾನ್ಯ ಆರೋಗ್ಯ, ಸ್ತ್ರೀರೋಗ, ಕಣ್ಣಿನ ತೊಂದರೆ, ಚರ್ಮ, ಮೂಳೆ ತೊಂದರೆ ಹಾಗೂ ಹಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಪಾಸಣೆ ಮಾಡಿ, ಔಷಧಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಶಿಕ್ಷಕ ಶೇಖರ ಹೂಗಾರ, ಶಿಕ್ಷಕ ವೃಂದ, ಉಪನ್ಯಾಸಕ ವೃಂದ, ಶಿಕ್ಷಕೇತರ ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.