ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 15: ಒಂದೆರಡು ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದ್ದು, ವಿರೋಧ ಪಕ್ಷದ ನಾಯಕರಾಗಿ ಬಿಜೆಪಿಯಿಂದ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ 56 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಅಧಿಕೃತ ವಿರೋಧ ಪಕ್ಷವಾಗಲಿದೆ. ಈ ವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆ ಇದ್ದು, ಬಸವರಾಜ ಬೊಮ್ಮಾಯಿ ಬಿಜೆಪಿ ಶಾಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕರಾದವರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ.
ಬಿಜೆಪಿಯಿಂದ ಹಲವು ಪ್ರಮುಖ ನಾಯಕರು ಸೋಲು ಅನುಭವಿಸಿದ್ದಾರೆ. ಸ್ಪಷ್ಟ ಬಹುಮತ ಹೊಂದಿರುವ ಸರ್ಕಾರವನ್ನು ದಿಟ್ಟವಾಗಿ ಎದುರಿಸಬೇಕಾದರೆ ಅನುಭವ ಇರುವ ಮತ್ತು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿರುವ ಬಸವರಾಜ ಬೊಮ್ಮಾಯಿ ಅವರೇ ಸೂಕ್ತ ಎಂದು ಬಿಜೆಪಿ ಸಹ ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.
ಸಾಮಾನ್ಯವಾಗಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದವರನ್ನು ಅವರ ಹಿರಿತನಕ್ಕೆ ಬೆಲೆ ಕೊಟ್ಟು ಸ್ಥಾನಮಾನ ಕೊಡುವುದು ಶಿಷ್ಟಾಚಾರ. ಅದರಂತೆ ಬೊಮ್ಮಾಯಿ ಅವರನ್ನು ವಿಧಾನಸಭೆಯ ಪ್ರತಿಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗುತ್ತದೆ ಎನ್ನಲಾಗಿದೆ.
ಸ್ವತಃ ಕಾನೂನು ತಜ್ಞರು ಮತ್ತು ಸಂಸದೀಯ ವಿಷಯಗಳಲ್ಲಿ ಸಾಕಷ್ಟು ಪರಿಣಿತಿ ಹೊಂದಿರುವ ಬೊಮ್ಮಾಯಿ ಅವರೇ ಸದ್ಯ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಸಮರ್ಥವಾಗಿದ್ದಾರೆ. ಇವೆಲ್ಲವನ್ನೂ ಪರಿಗಣಿಸಿಯೇ ಪಕ್ಷದ ವರಿಷ್ಠರು ಬೊಮ್ಮಾಯಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡಲಾಗುತ್ತದೆ ಎನ್ನಲಾಗಿದೆ.
ಉಳಿದಂತೆ ಉಪನಾಯಕನ ಸ್ಥಾನಕ್ಕೆ ಮಾಜಿ ಸಚಿವ ಆರ್.ಅಶೋಕ್ ಆಯ್ಕೆಯಾಗುವ ಸಂಭವವಿದೆ. ಹಿರಿತನದ ಆಧಾರದ ಮೇಲೆ ಮಾಜಿ ಸಚಿವ ಆರಗ ಜ್ಞಾನೇಂದ್ರ ಸರ್ಧೆ ಒಡ್ಡುವ ಸಾಧ್ಯತೆ ಇದೆ.