ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 15: ಮುಖ್ಯಮಂತ್ರಿ ಸ್ಥಾನದ ಮುಂಚೂಣಿಯಲ್ಲಿರುವ ಹಿರಿಯ ನಾಯಕರಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ಆಯ್ಕೆ ಕುರಿತಂತೆ ಗೌಪ್ಯ ವರದಿ ಆಧಾರದ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮತ್ತು ಶಾಸಕಾಂಗ ಪಕ್ಷದ ಸಭೆಯ ಕೇಂದ್ರ ವೀಕ್ಷಕ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರೊಂದಿಗೆ ವೀಕ್ಷಕರು ದೆಹಲಿಗೆ ತೆರಳಿದ್ದಾರೆ.
ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಮ್ಮ ವರದಿ (ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ವೀಕರಿಸಿದ ಪ್ರತಿಕ್ರಿಯೆ) ರಹಸ್ಯವಾಗಿದೆ. ನಾವು ಅದನ್ನು ನಾವು ಬಹಿರಂಗಪಡಿಸಲು ಸಾಧ್ಯವಿಲ್ಲ. ನಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅದನ್ನು ಬಹಿರಂಗಪಡಿಸಲು ಸಾಧ್ಯ’ ಎಂದರು.
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಮತ್ತು ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಅವರನ್ನು ಸಿಎಲ್ಪಿ ನಾಯಕನ ಆಯ್ಕೆಗೆ ವೀಕ್ಷಕರನ್ನಾಗಿ ಮಲ್ಲಿಕಾರ್ಜುನ ಖರ್ಗೆ ನಿಯೋಜಿಸಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಭಾನುವಾರ ನಡೆದ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.