ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 18: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ 91ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಶಭಾಶಯ ತಿಳಿಸಿದ್ದರೆ, ರಾಷ್ಟ್ರ ಮತ್ತು ರಾಜ್ಯದ ಅನೇಕ ಗಣ್ಯರು ಶುಭ ಕೋರಿದ್ದಾರೆ.
‘ನಮ್ಮ ದೇಶಕ್ಕೆ ದೇವೇಗೌಡರ ಕೊಡುಗೆ ಗಮನಾರ್ಹವಾಗಿದೆ. ಅವರು ಅರೋಗ್ಯವಂತರಾಗಿ ದೀರ್ಘಕಾಲ ಜೀವಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಜತೆಗೆ, ರಾಜ್ಯಪಾಲ ಥಾವರಚಂದ್ ಗೆಹಲೋತ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ರಾಷ್ಟ್ರ ಮಟ್ಟದ ಅನೇಕ ನಾಯಕರು ಮಾಜಿ ಪ್ರಧಾನಿಗಳಿಗೆ ಶುಭ ಹೇಳಿದ್ದಾರೆ.
ಮನೆಯಲ್ಲಿ ಕೇಕ್ ಕತ್ತರಿಸಿ ಸಂಭ್ರಮ:
ಬೆಳಗ್ಗೆಯೇ ಮಾಜಿ ಪ್ರಧಾನಿಗಳ ನಿವಾಸದಲ್ಲಿ ಮಕ್ಕಳು, ಮೊಮ್ಮಕ್ಕಳು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿಗಳಿಗೆ ಶುಭ ಕೋರಿ ಆಶೀರ್ವಾದ ಪಡೆದರು.
ಅಲ್ಲದೆ, ವಿವಿಧ ಪಕ್ಷಗಳ ಹಿರಿಯ ಮುಖಂಡರು, ಜೆಡಿಎಸ್ ಪಕ್ಷದ ನೂತನ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ತಮ್ಮ ಶುಭಾಶಯಗಳನ್ನು ತಿಳಿಸಿದರು. ಇದಕ್ಕೂ ಮುನ್ನ ಮಾಜಿ ಪ್ರಧಾನಿಗಳು ಜೆಪಿ ನಗರದ ಶ್ರೀ ತಿರುಮಲಗಿರಿ ವೆಂಕಟರಮಣ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಬಸವರಾಜ ಬೊಮ್ಮಾಯಿ ಭೇಟಿ:
ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ ಪದ್ಮನಾಭನಗರದ ನಿವಾಸಕ್ಕೆ ತೆರಳಿ ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಅರ್ ಅಶೋಕ್, ಗೋವಿಂದ ಕಾರಜೋಳ, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ.ರಮೇಶ್ ಗೌಡ ಇತರರು ಹಾಜರಿದ್ದರು.
ತಮ್ಮ ಜನ್ಮದಿನಕ್ಕೆ ಶುಭ ಹಾರೈಸಿದ ಎಲ್ಲರಿಗೂ ದೇವೇಗೌಡರು ಧನ್ಯವಾದಗಳನ್ನು ತಿಳಿಸಿದ್ದಾರೆ.