ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ 19: ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಮತ್ತು ಸಂಪುಟ ಸದಸ್ಯರ ಪ್ರಮಾಣ ವಚನ ಸ್ವೀಕರ ಕಾರ್ಯಕ್ರಮಕ್ಕೆ ಮಳೆರಾಯ ಅಡ್ಡಿ ಉಂಟುಮಾಡುವ ಆತಂಕ ಎದುರಾಗಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಆದರೆ, ಶನಿವಾರದಿಂದ ಮೂರ್ನಾಲ್ಕು ದಿನ ಮಳೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 20 ಮತ್ತು ಮೇ 21 ರಂದು ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮಿಂಚು ಮತ್ತು ವೇಗವಾದ ಗಾಳಿಯೊಂದಿಗೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಂಠೀರವ ಕ್ರೀಡಾಂಗಣದಲ್ಲಿ ಅದ್ಧೂರಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಜನ ಸೇರುವ ನಿರೀಕ್ಷೆ ಇದೆ. ಈ ವೇಳೆ ಮಳೆ ಬಂದು ಸಮಾರಂಭಕ್ಕೆ ಅಡ್ಡಿ ಉಂಟು ಮಾಡಬಹುದೇ ಎಂಬ ಆತಂಕ ಎದುರಾಗಿದೆ.