ಸುದ್ದಿಮೂಲ ವಾರ್ತೆ
ತುಮಕೂರು, ಮೇ 22: ಜಿಲ್ಲೆಗೆ ನಿಗಧಿಪಡಿಸಿದ ಗುರಿ ಅನ್ವಯ ರಸಗೊಬ್ಬರಗಳ ಕಾಪು ದಾಸ್ತಾನು ವ್ಯವಸ್ಥಿತವಾಗಿ ಮಾಡಿ, ರೈತರಿಗೆ ಯಾವುದೇ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಕೊರತೆಯಾಗದಂತೆ ವಿತರಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸೂಚಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ‘2023ರ ಮುಂಗಾರು ಹಂಗಾಮು ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸರಬರಾಜು ದಾಸ್ತಾನು ಮತ್ತು ವಿತರಣೆ’ ಕುರಿತ ಪೂರ್ವ ಸಿದ್ದತೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ರೈತರಿಗೆ ಉತ್ತಮ ಬಿತ್ತನೆ ಬೀಜ ಒದಗಿಸುವ ಉದ್ದೇಶದಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದ್ದು, ರೈತರ ಕೃಷಿ ಜಮೀನುಗಳಲ್ಲಿ ಬಿತ್ತನೆಗೆ ಬೇಕಾದಂತಹ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ಪೂರೈಕೆಯಾಗುವಂತೆ ನಿಗಾವಹಿಸಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೂಚನಾ ಫಲಕಗಳಲ್ಲಿ ಪ್ರದರ್ಶನ:
ರೈತರು ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ರೈತರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡುವ ಮೂಲಕ ರೈತರಿಗೆ ನೆರವಾಗಬೇಕು, ಬಿತ್ತನೆ ಬೀಜ, ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸುವರು ಕಂಡು ಬಂದಲ್ಲಿ ಅವರ ಮೇಲೆ ಕ್ರಮ ಜರುಗಿಸಬೇಕು, ಕೃಷಿ ಇಲಾಖೆ ಅಧಿಕಾರಿಗಳು, ತಾಲ್ಲೂಕು ಸಿಡಿಒಗಳು ಪ್ರತಿದಿನ ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅಲ್ಲದೇ, ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಬಿತ್ತನೆ ಬೀಜ, ರಸಗೊಬ್ಬರದ ದಾಸ್ತಾನು ವಿವರ ಹಾಗೂ ದರಗಳನ್ನು ಸೂಚನಾ
ಫಲಕಗಳಲ್ಲಿ ಪ್ರಚುರಪಡಿಸಿರುವ ಕುರಿತು ಪರಿಶೀಲಿಸಬೇಕು ಎಂದು ಸೂಚಿಸಿದರು.
ಜಿಲ್ಲೆಗೆ ಸರಬರಾಜು ಆಗಬೇಕಾದ ರಸಗೊಬ್ಬರವನ್ನು ವಿಳಂಬಮಾಡದೇ ನಿಗದಿತ ಪ್ರಮಾಣದಲ್ಲಿ ವಿತರಿಸಬೇಕು. ರೈತರಿಗೆ ಮತ್ತೊಂದು ಕಂಪೆನಯ ರಸಗೊಬ್ಬರ ಖರೀದಿಸುವಂತೆ ಒತ್ತಡ ಹೇರಬಾರದು. ನಿಗದಿತ ದರಕ್ಕೆ ಮಾರಾಟ ಮಾಡಬೇಕು. ರಸಗೊಬ್ಬರದ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಮಾರಾಟಗಾರರ ಮೇಲೆ ಕ್ರಮ ಜರುಗಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಕೃಷಿ ಮಾರುಕಟ್ಟೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು, ಎಲ್ಲಾ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು, ವ್ಯವಸ್ಥಾಪಕರು, ಕೆ.ಎಸ್.ಎಸ್.ಸಿ. ವ್ಯವಸ್ಥಾಪಕರು, ಕೆ.ಓ.ಎಫ್, ವ್ಯವಸ್ಥಾಪಕರು, ಕೆ.ಎಫ್.ಸಿ.ಎಂ.ಎಫ್., ರಸಗೊಬ್ಬರ ತಯಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತು
ರಸಗೊಬ್ಬರ ಮಾರಾಟಗಾರರು ಇನ್ನಿತರರು ಸಭೆಯಲ್ಲಿ ಹಾಜರಿದ್ದರು.