ಸುದ್ದಿಮೂಲ ವಾರ್ತೆ
ಮೈಸೂರು, ಮೇ 23: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಮಾತುಕತೆ ನಡೆದಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.
ಮೈಸೂರು ಜಿಲ್ಲೆಯ ಸುತ್ತೂರು ಮಠಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಐದು ವರ್ಷಗಳ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸ್ಪಷ್ಟಪಡಿಸಿದರು.
ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಮಾತುಕತೆಗಳು ನಡೆದಿಲ್ಲ. ಲೋಕಸಭಾ ಚುನಾವಣೆ ಮುಗಿದಿರೂ ಯಾವುದೇ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ,’ ಎಂದು ಎಂ.ಬಿ. ಪಾಟೀಲ ಹೇಳಿದರು.
ಬಿಜೆಪಿ ಅಧಿಕಾರದಲ್ಲಿ ಇದ್ದ ಅವಧಿಯಲ್ಲಿ ಪಿಎಸ್ಐ ನೇಮಕಾತಿ ಹಗರಣ, ಆರೋಗ್ಯ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳ ಹಗರಣಗಳ ಬಗ್ಗೆಯೂ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.