ಬೆಂಗಳೂರು, ಜೂ.16: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ ಒಪ್ಪಿಗೆ ಪತ್ರ ಕೊಟ್ಟಿತ್ತೇ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದು, ದಾಖಲೆಗಳನ್ನು ಟ್ವೀಟ್ ಮೂಲಕ ಬಹಿರಂಗಪಡಿಸಿದ್ದಾರೆ.
ಇಲ್ಲಿದೆ ಎಫ್.ಸಿ.ಐ ಕಮಿಟ್ಮೆಂಟ್ ಪತ್ರ ಎಂದು ತಮ್ಮ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು ಎಂದು ವ್ಯಂಗ್ಯವಾಡಿದ್ದಾರೆ.
ಸಿ.ಟಿ.ರವಿ ಮತ್ತಿತರ ಮತ್ತು ಬಿಜೆಪಿ ಕರ್ನಾಟಕ ನಾಯಕರು ಮೊದಲು, ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಕಿಡಿ ಕಾರಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ ಕಮಿಟ್ಮೆಂಟ್ ಪತ್ರ ಕೊಟ್ಟಿತ್ತೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದರು.