ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.5: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿಗಳಲ್ಲಿ ಆರ್ಡಿಪಿಆರ್ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲು ಪರಿಶೀಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ.
ಗದಗದಲ್ಲಿರುವ ಆರ್ಡಿಪಿಆರ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಮತ್ತು ಹಾಲಿ ವಿದ್ಯಾರ್ಥಿಗಳ ನಿಯೋಗ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸಚಿವರು ಈ ಭರವಸೆ ನೀಡಿದ್ದಾರೆ.
ಇತರೆ ಇಲಾಖೆಗಳಲ್ಲಿ ಅದಕ್ಕೆ ಸಂಬಂಧಿಸಿದ ಕೋರ್ಸ್ಗಳಲ್ಲಿ ಪದವಿ ಪಡೆದ ಅಭ್ಯರ್ಥಿಗಳನ್ನು ನೇಮಕಾತಿ ಸಂದರ್ಭದಲ್ಲಿ ಮೀಸಲಾತಿ ಒದಗಿಸಲಾಗುತ್ತದೆ. ಉದಾಹರಣೆಗೆ ಕೃಷಿ, ಪಶುಸಂಗೋಪನೆ, ಅರಣ್ಯ ಇಲಾಖೆ, ಯೋಜನಾ ಮತ್ತು ಸಾಂಖ್ಯಿಕ, ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತೋಟಗಾರಿಕೆ ಮತ್ತು ಸಹಕಾರ ಇಲಾಖೆಗಳ ನೇಮಕಾತಿಯಲ್ಲಿ ಸಂಬಂಧಿಸಿದ ವಿಷಯಗಳಲ್ಲಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತಿದೆ. ಆದರೆ, ಗ್ರಾಮೀಣಾಭಿವೃದ್ಧಿ ವಿಷಯದಲ್ಲಿ ಪದವಿ ಪಡೆದವರನ್ನು ಮಾತ್ರ ಕಡೆಗಣಿಸಲಾಗುತ್ತಿದೆ ಎಂದು ಸಚಿವರ ಗಮನಕ್ಕೆ ತರಲಾಯಿತು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ 2017-18ನೇ ಶೈಕ್ಷಣಿಕ ವರ್ಷದಿಂದ ಸ್ಥಾಪನೆಗೊಂಡು ಈಗಾಗಲೇ ನೂರಾರು ವಿದ್ಯಾರ್ಥಿಗಳು ಅಲ್ಲಿಂದ ಹೊರಬಂದಿದ್ದಾರೆ. ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದಂತೆ ಕ್ಷೇತ್ರ ಅನುಭ, ಕೌಶಲ್ಯಗಳು ಮತ್ತು ಸೈದ್ಧಾಂತಿಕ ಜ್ಞಾನದ ಮೂಲಕ ವಿಶೇಷ ಸಾಮರ್ಥ್ಯ ಹೊಂದಿದ್ದಾರೆ ಎಂದು
ಆರ್ಡಿಪಿಆರ್ ಇಲಾಖೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ-1 ಹುದ್ದೆಗಳ ನೇಮಕಾತಿಯಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಲಾಯಿತು.