ಮೈಸೂರು, ಜು 13 : ತಾಲೂಕಿನ ವರಕೋಡು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಗುರುವಾರ ದಿಢೀರ್ ಭೇಟಿ ನೀಡಿ ಶಾಲೆಯ ಮೂಲಭೂತ ಸೌಕರ್ಯವನ್ನು ಪರಿಶೀಲಿಸಿದರು.
ಈ ವೇಳೆ ಶಾಲೆಯ ಗ್ರಂಥಾಲಯ, ವಿಜ್ಙಾನ ಪ್ರಯೋಗಾಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕಲಿಕೆಗೆ ಅನುಗುಣವಾಗಿರುವ ಸೌಲಭ್ಯಗಳನ್ನು ವೀಕ್ಷಿಸಿದರು. ವಿದ್ಯಾರ್ಥಿನಿಲಯದ ಶೌಚಾಯಲವನ್ನು ಪರಿಶೀಲಿಸಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.
ಬಳಿಕ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಸಚಿವರು, ಜನಸಂಖ್ಯೆ ಸ್ಟೋಟದಿಂದ ಆರೋಗ್ಯ, ಶಿಕ್ಷಣ, ನಿರುದ್ಯೋಗ ಮೇಲೆ ಉಂಟಾಗುವ ಪ್ರತಿಕೂಲ ಪರಿಣಾಮವನ್ನು ವಿವರಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಅಡುಗೆ ಕೋಣೆಗೆ ಭೇಟಿ ನೀಡಿ, ಅಡುಗೆ ಸಿಬ್ಬಂದಿಯು ಸ್ಚಚ್ಛವಾಗಿರಬೇಕು. ಕೊಣೆಯನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು ಸೂಚಿಸಿ, ಹುರುಳಿಕಾಳಿನ ಪಲ್ಯವನ್ನು ಸವಿದರು.