ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.21: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹೊಸದರಲ್ಲಿ ವಿದ್ಯುತ್ ದರ ಏರಿಕೆ ಶಾಕ್ ನೀಡಿತ್ತು. ಈಗ ಹಾಲಿನ ದರ ಹೆಚ್ಚಳ ಮಾಡುವ ಮೂಲಕ ಮತ್ತೊಮ್ಮೆ ಗ್ರಾಹಕರಿಗೆ ಮತ್ತೆ ಎಳೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿದರು. ಸಭೆಯಲ್ಲಿ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ. ಹೊಸ ದರಗಳು. ಆ.1ರಿಂದ ಜಾರಿಗೆ ಬರಲಿದೆ.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ಕೆಎಂಎಫ್ ನಿರ್ದೇಶಕ ಎಚ್.ಡಿ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡರು ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂ. ಹೆಚ್ಚಳ ಮಾಡಬೇಕು ಎಂದು ಹಾಲು ಒಕ್ಕೂಟಗಳಿಂದ ಕೆಎಂಎಫ್ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸುಮಾರು ಎರಡು ತಾಸು ಚರ್ಚೆ ನಡೆಸಿದ ಬಳಿಕ ಅಂತಿಮವಾಗಿ ಪ್ರತಿ ಲೀಟರ್ಗೆ 3ರೂ. ದರ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ಸಭೆ ಬಳಿಕ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಒಂದು ಲೀಟರ್ಗೆ 3 ರೂಪಾಯಿ ದರ ಹೆಚ್ಚಳ ಮಾಡುವುದಕ್ಕೆ ಮುಖ್ಯಮಂತ್ರಿಗಳು ತೀರ್ಮಾನ ಮಾಡಿದ್ದಾರೆ. ರೈತರ ಪರವಾಗಿ, ಒಕ್ಕೂಟದ ಎಲ್ಲಾ ಅಧ್ಯಕ್ಷರ ಪರವಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದರು.