ಸುದ್ದಿಮೂಲ ವಾರ್ತೆ
ಬೆಂಗಳೂರು, ಆ.15: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಕಾನೂನಿನ ಮುಂದೆ ಎಲ್ಲರೂ ಸರಿಸಮಾನರು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ.ಬಿ ವರಲೆ ತಿಳಿಸಿದರು.
ಇಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾದ ಸ್ವಾತಂತ್ರ್ಯದಿನೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಮಾಜದಲ್ಲಿ ನ್ಯಾಯಾಂಗದ ಜವಾಬ್ದಾರಿ ಹಿರಿದಿದೆ. ಅದರ ಮೌಲ್ಯ ಹಾಗೂ ತತ್ವಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ನ್ಯಾಯ ಪಡೆಯುವುದು ಪ್ರತಿಯೊಬ್ಬನ ನಾಗರೀಕನ ಹಕ್ಕು ಹೊರತು ವಿಶೇಷ ಸವಲತ್ತಲ್ಲ. ಇದಕ್ಕೆ ಬಡವ, ಶ್ರೀಮಂತ ಮುಂತಾದ ಯಾವುದೇ ಮಾನದಂಡವಿಲ್ಲ. ಕಾನೂನಿನ ಮುಂದೆ ವ್ಯಕ್ತಿಯ ಸಾಮಾಜಿಕ, ಆರ್ಥಿಕ ಅರ್ಹತೆ ಯಾವುದೇ ಪ್ರಭಾವ ಬೀರುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಲು ನಾಯಾಧೀಶರು, ವಕೀಲರು ಶ್ರಮಿಸಬೇಕು. ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ 2,72,041 ಪ್ರಕರಣಗಳು ಬಾಕಿ ಉಳಿದಿದ್ದು, ಇವುಗಳನ್ನು ಬೇಗ ವಿಲೇವಾರಿ ಮಾಡಬೇಕು ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರೆತಿದೆ. ಇದನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಈ ಸಂದರ್ಭದಲ್ಲಿ ಮಾನ್ಯ ಉಚ್ಛ ನ್ಯಾಯಾಲಯದ ನ್ಯಾಯಾಧೀಶರುಗಳು, ಹೆಚ್ಚುವರಿ ಸಾಲಿಸಿಟರ್ ಜನರಲ್ ಶಾಂತಿಭೂಷಣ್, ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ. ರವಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.