ಸುದ್ದಿಮೂಲ ವಾರ್ತೆ
ಬೆಂಗಳೂರು, ಆ.17: ಮುಂಬರುವ ಲೋಕಸಭಾ ಚುನಾವಣೆ ಮತ್ತು ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪಕ್ಷದ ಶಾಸಕರಿಗೆ ಸೂಚಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆ ಹಲವು ಜಿಲ್ಲೆಗಳ ಶಾಸಕರು ಹಾಗೂ ಸಚಿವರೊಂದಿಗೆ ಆಯಾ ಜಿಲ್ಲೆಗಳ ಅಭಿವೃದ್ಧಿ ಹಾಗೂ ಸರ್ಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಸಭೆ ನಡೆಸಿದ ಅವರು, ವಿಶೇಷವಾಗಿ ಲೋಕಸಭಾ ಚುನಾವಣೆಯ ರಣತಂತ್ರ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು.
ಗದಗ, ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಸಚಿವರು, ಶಾಸಕರೊಂದಿಗೆ ಮೊದಲು ಚರ್ಚಿಸಿದರು. ನಂತರ ಮೈಸೂರು, ಚಿಕ್ಕಮಗಳೂರು ಹಾಗೂ ವಿಜಯನಗರ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಡಳಿತ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿ, ಅಭಿವೃದ್ಧಿ ವಿಚಾರಗಳ ಕುರಿತು ಸಮಾಲೋಚಿಸಿದರು.
ಉತ್ತರ ಕನ್ನಡ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಸರ್ಕಾರ ಮತ್ತು ಪಕ್ಷದ ಜತೆ ಸಮನ್ವಯ ಕಾಯ್ದುಕೊಳ್ಳುವ ಜೊತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಮಧ್ಯಮ ಮತ್ತು ಬಡ ವರ್ಗದ ಎಲ್ಲಾ ಜಾತಿ ಸಮುದಾಯಗಳ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಸೂಚಿಸಿದರು.
ಶಾಸಕರು ಸಚಿವರ ಜತೆ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು. ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಲು ಈಗಿನಿಂದಲೇ ಸಜ್ಜಾಗುವಂತೆ ಆದೇಶಿಸಿದರು.
ತಮ್ಮ ತವರು ಜಿಲ್ಲೆ ಮೈಸೂರು ಜಿಲ್ಲೆಯ ಶಾಸಕರ ಜೊತೆಗೂ ಚರ್ಚಿಸಿದರು. ಮೈಸೂರು ಪಾಲಿಕೆ ಚುನಾವಣೆ ಕೂಡ ಬಿಬಿಎಂಪಿ ಚುನಾವಣೆ ವೇಳೆಗೇ ಬರುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಎರಡೂ ಚುನಾವಣೆಗಳು ಮಹತ್ವದ್ದಾಗಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದು ಖಚಿತ. ಅದೇ ರೀತಿ ಮೈಸೂರು ಪಾಲಿಕೆಯನ್ನೂ ಗೆಲ್ಲುವ ಕುರಿತು ಚರ್ಚೆ ನಡೆಯಿತು.
ಮೈಸೂರು – ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿ ಗೆಲುವು ಸಾಧಿಸಲು ಬೇಕಾಗಿರುವ ಎಲ್ಲಾ ಕಾರ್ಯತಂತ್ರ ಅನುಸರಿಸುವಂತೆ ನಿರ್ದೇಶನ ನೀಡಿದ್ದಾರೆ.