ಸುದ್ದಿಮೂಲ ವಾರ್ತೆ
ಮೈಸೂರು, ಸೆ. 6 : ಶಿಕ್ಷಣ ಕೇವಲ ಪಾಠಕ್ಕೆ ಮಾತ್ರ ಸೀಮಿತವಾಗಿರದೆ ರಾಷ್ಟ್ರದ ಪುನರ್ ನಿರ್ಮಾಣಕ್ಕೆ ಪೂರಕವಾಗುವಂತೆ ಇರಲಿ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಸಿ ಮಹದೇವಪ್ಪ ಹೇಳಿದರು.
ನಗರದ ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆಯ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೇವಲ ಶಾಲೆಗಳಲ್ಲಿ ಪಾಠ ಮಾಡಿದವರು ಮಾತ್ರ ಶಿಕ್ಷಕರಲ್ಲ. ನಮ್ಮ ಜೀವನದಲ್ಲಿ ಜೀವನ ಪಾಠ ಹೇಳಿ ಕೊಟ್ಟವರು ಶಿಕ್ಷಕರೇ. ಶಿಕ್ಷಣದ ಮೂಲಕ ಮಾನವೀಯ ಮೌಲ್ಯಗಳನ್ನು ತಿಳಿಸುತ್ತಾ, ಮಗುವನ್ನು ಸಮಾಜದ ಜವಾಬ್ದಾರಿಯುತ ಪ್ರಜೆಯಾಗಿ ನಿರ್ಮಿಸುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯಪಟ್ಟರು.
ಸಿದ್ಧಾಂತಗಳ ಮೂಲಕ ದೇಶವನ್ನು ಎಚ್ಚರಿಸುವುದು. ವೈಚಾರಿಕ ಹಾಗೂ ವೈಜ್ಞಾನಿಕ ಶಿಕ್ಷಣವನ್ನು ನೀಡಬೇಕೆಂಬುದು ಡಾ. ಬಿ.ಆರ್ ಅಂಬೇಡ್ಕರ್ ರವರ ಸಂದೇಶ. ಮೈಸೂರು ಜಿಲ್ಲೆಯಲ್ಲಿ ಸುಮಾರು 19 ಸಾವಿರ ಶಿಕ್ಷಕರಿದ್ದಾರೆ. 4,20,000ಕ್ಕೂ ಹೆಚ್ಚು ಮಕ್ಕಳಿದ್ದಾರೆ. 33 ಶಿಕ್ಷಕರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಭಾಜನರಾಗಿದ್ದು, ಇಬ್ಬರು ಶಿಕ್ಷಕರು ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆ ಮತ್ತಷ್ಟು ಸಾಧನೆ ಮಾಡಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ 33 ಶಿಕ್ಷಕರನ್ನು, ನಿವೃತ್ತ ಶಿಕ್ಷಕರನ್ನು ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದ ಶಾಲಾ ಮುಖ್ಯ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ಶಿಕ್ಷಕರು ‘ನಮ್ಮ ದಿನದಂದು ನಮ್ಮ ಹಕ್ಕೋತಾಯಗಳು’ ಎಂಬ ಶಿಕ್ಷಕರ ಸಮಸ್ಯೆಗಳನ್ನು ಒಳಗೊಂಡ ಮನವಿ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ತನ್ವೀರ್ ಸೇಠ್, ಕೆ ಹರೀಶ್ ಗೌಡ, ಟಿ ಎಸ್ ಶ್ರೀವತ್ಸ, ವಿಧಾನಪರಿಷತ್ ಶಾಸಕರಾದ ಸಿಎನ್ ಮಂಜೇಗೌಡ, ಮರಿತಿಬ್ಬೇಗೌಡ ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಉಪ ಮಹಾಪೌರರಾದ ಡಾ ಜಿ. ರೂಪ, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗಾಯತ್ರಿ ಕೆ ಎಂ, ಪ್ರಧಾನ ಭಾಷಣಕಾರರಾದ ಶಿವಪ್ರಕಾಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ. ಗೋವಿಂದರಾಜು ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಕೆ. ಪಾಂಡು ಇತರರು ಭಾಗವಹಿಸಿದ್ದರು.