ಚಾಮರಾಜನಗರ, ಸೆ. 21: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸುತ್ತಿದ್ದಂತೆಯೇ, ನಗರದಲ್ಲಿ ಗುರುವಾರ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ಸೇನಾ ಪಡೆಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದವು.
ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ 998 (ಹಿಂದಿನ 209) ಅನ್ನು ಬಂದ್ ಮಾಡಿ ಅಕ್ರೋಶ ಹೊರಹಾಕಿದರು.
ಕಬ್ಬು ಬೆಳೆಗಾರರ ಸಂಘದ ಮೈಸೂರು- ಚಾಮರಾಜನಗರ ಜಿಲ್ಲೆಯ ಕಾರ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಮಾತನಾಡಿ, ನಮ್ಮ ರಾಜ್ಯದ ಜನರಿಗೆ ನೀರಿಲ್ಲ. ಸುಪ್ರೀಂಕೋರ್ಟ್ ಆದೇಶವನ್ನು ವಿರೋಧಿಸಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವ ಉದಾಹರಣೆಗಳಿವೆ. ಬಂಗಾರಪ್ಪ ಅವರು ನಿರ್ಧಾರ ಕೈಗೊಂಡಿದ್ದರು. ಇದು ಕುಡಿಯುವ ನೀರಿನ ವಿಚಾರ. ವಿಶ್ವಸಂಸ್ಥೆ ಆದೇಶ ಮಾಡಿದರೂ ಹರಿಸಬಾರದು. ಸರ್ಕಾರ ನ್ಯಾಯಾಲಯಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಸುಪ್ರೀಂಕೋರ್ಟ್ನಲ್ಲಿ ಮರು ಅರ್ಜಿ ಅಥವಾ ಮೇಲ್ಮನವಿ ಸಲ್ಲಿಸಲಿ. ಒಂದು ಲೀಟರ್ ನೀರನ್ನೂ ತಮಿಳುನಾಡಿಗೆ ಬಿಡಬಾರದು’ ಎಂದು ಆಗ್ರಹಿಸಿದರು.
ನೀರು ಬಿಟ್ಟರೆ ಕ್ಯಾತೆ ತೆಗೆಯುವ ತಮಿಳುನಾಡು ಸರ್ಕಾರಕ್ಕೆ ರಾಜ್ಯದ ರೈತರು ಬುದ್ಧಿ ಕಲಿಸುತ್ತೇವೆ. ತಮಿಳುನಾಡು ವಾಹನಗಳ ಪ್ರವೇಶ, ಚಲನಚಿತ್ರಗಳ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ. ತಮಿಳುನಾಡಿಗೆ ನೀರು ಹರಿಸುವುದಿಲ್ಲ ಎಂಬ ನಿರ್ಧಾರವನ್ನು ಸರ್ಕಾರ ಸರ್ವಪಕ್ಷ ಸಭೆಯಲ್ಲಿ ತೆಗೆದುಕೊಂಡಿದೆ. ಅದರಂತೆ ನಡೆದುಕೊಳ್ಳಬೇಕು. ಇಲ್ಲದಿದ್ದರೆ, ಅದರ ಪರಿಣಾಮವನ್ನು ರಾಜ್ಯ ಸರ್ಕಾರ ಅನುಭವಿಸಬೇಕಾಗುತ್ತದೆ ಎಂದು ಭಾಗ್ಯರಾಜ್ ಎಚ್ಚರಿಸಿದರು.
ಚಾಮರಾಜೇಶ್ವರ ಸ್ವಾಮಿ ದೇವಾಲಯದ ಮುಂಭಾಗ ಸೇರಿದ ಪ್ರತಿಭಟನಕಾರರು, ಅಲ್ಲಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ ವಾಹನಗಳ ಸಂಚಾರ ತಡೆದರು. ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಧರಣಿ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
ಸುಪ್ರೀಂಕೋರ್ಟ್ನ ಆದೇಶ ಹೊರ ಬೀಳುತ್ತಿದ್ದಂತೆ ಪ್ರತಿಭಟನಾಕಾರರು ಖಾಲಿ ಮಡಕೆ ಪ್ರದರ್ಶಿಸಿ ಆಕ್ರೋಶ ಹೊರ ಹಾಕಿದರು. ಸುಪ್ರೀಂಕೋರ್ಟ್ ಆದೇಶ ಕರ್ನಾಟಕದ ಪಾಲಿಗೆ ಮರಣಶಾಸನವಾಗಿದೆ ಎಂದು ದೂರಿದರು.
ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಈ ಹಿಂದೆ ತಮಿಳುನಾಡು ಸರ್ಕಾರ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದಾಗಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಈಗ ಸುಪ್ರೀಂಕೋರ್ಟ್ ತಮಿಳುನಾಡಿನ ಪರ ಆದೇಶ ನೀಡಿರುವುದು ಕರ್ನಾಟಕ ಪಾಲಿಗೆ ಬರಸಿಡಿಲು ಬಡಿದಂತಾಗಿದೆ ಎಂದರು.
ಕರ್ನಾಟಕದಲ್ಲಿ ಭೀಕರ ಬರಗಾಲವಿದ್ದು, ಸರಿಯಾಗಿ ಮಳೆಯಾಗದ ಕಾರಣದಿಂದ ಜಲಾಶಯಗಳಲ್ಲಿ ನೀರಿಲ್ಲ. ಇಂತಹ ಸಂದರ್ಭದಲ್ಲಿ ಸುಪ್ರೀಂಕೋರ್ಟ್ನ ನಿರ್ಧಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯ ಸರ್ಕಾರ ತಕ್ಷಣವೇ ಮೇಲ್ಮನವಿ ಸಲ್ಲಿಸಬೇಕು. ಆಡಳಿತ ಪಕ್ಷ, ವಿರೋಧ ಪಕ್ಷಗಳು, ಸಂಸದರು, ಶಾಸಕರು ಪಕ್ಷಬೇಧ ಮರೆತು ಬೀದಿಗಿಳಿದು ಹೋರಾಟ ಮಾಡಬೇಕು’ ಎಂದು ಅವರು ಆಗ್ರಹಿಸಿದರು.
ರಾಜ್ಯ, ರೈತರ ಹಿತದೃಷ್ಟಿಯಿಂದ ವಿದ್ಯಾರ್ಥಿಗಳು ಕೂಡ ಕಾವೇರಿ ನೀರು ವಿಚಾರದಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕು ಎಂದು ಶ್ರೀನಿವಾಸ ಗೌಡ ಮನವಿ ಮಾಡಿದರು.