ಸುದ್ದಿಮೂಲ ವಾರ್ತೆ
ತುಮಕೂರು, ಸೆ. 25 : ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರು ತಮ್ಮ ಪಠ್ಯದ ಜೊತೆಗೆ ದಿನಪತ್ರಿಕೆಗಳನ್ನು ಹಾಗೂ ಸ್ಪರ್ಧಾತ್ಮಕ ಪುಸ್ತಕಗಳನ್ನು ಓದುವುದರ ಮೂಲಕ
ಜ್ಞಾನವನ್ನು ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾನಸಿಕವಾಗಿ ಸಿದ್ಧರಾಗಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ನಗರದ ಮೈದಾಳ ರಸ್ತೆಯ ಬಸವಪಟ್ಟಣದಲ್ಲಿ 3.26 ಕೋಟಿ ವೆಚ್ಚದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ವ್ಯಕ್ತಿಯ ಜೀವನ ಬದಲಾಯಿಸುವಂತ ಸಾಮರ್ಥ್ಯ ಇರುವುದು ಶಿಕ್ಷಣಕ್ಕೆ ಮಾತ್ರ. ತುಮಕೂರು ಜಿಲ್ಲೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ . ಇಡೀ ವಿಶ್ವದಲ್ಲಿಯೇ ಭಾರತದಲ್ಲಿ ಹೆಚ್ಚು ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ಮಾತನಾಡಿ, ರಾಜ್ಯದಲ್ಲಿ ಹಿಂದುಳಿದ ವರ್ಗಗಳ 2443 ವಸತಿ ನಿಲಯಗಳಲ್ಲಿ ಒಟ್ಟು 2.5 ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡಬೇಕು ಎಂದು ವಿದ್ಯಾರ್ಥಿನಿಯರಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಹೆಚ್.ವಿ.ವೆಂಕಟೇಶ್, ಮಹಾನಗರ ಪಾಲಿಕೆ ಮೇಯರ್ ಪ್ರಭಾವತಿ, ಜಿಲ್ಲಾಧಿಕಾರಿ ಕೆ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಉಪಸ್ಥಿತರಿದ್ದರು.