ಸುದ್ದಿಮೂಲ ವಾರ್ತೆ
ತುಮಕೂರು,ಅ.2: ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಇಡೀ ವಿಶ್ವವೇ ಮೆಚ್ಚಿ ಕೊಂಡಿದೆ ಎಂದು ಗೃಹ ಸಚಿವಡಾ. ಜಿ ಪರಮೇಶ್ವರ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಏರ್ಪಡಿಸಲಾಗಿದ್ದ ಮಹಾತ್ಮ ಗಾಂಧೀಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ತುಮಕೂರು ಜಿಲ್ಲೆಗೆ ಮಹಾತ್ಮ ಗಾಂಧೀಜಿಯವರು ಆಗಮಿಸಿದ್ದರು. ಮೊದಲಿಗೆ 1927ರಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣಕ್ಕೆ ಬಂದು ಒಂದು ದಿನ ತಂಗಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅಸ್ಪೃಶ್ಯತೆ ಬಗ್ಗೆ ಕುರಿತು ಮಾತನಾಡಿದರು ಹಾಗೂ 1930ರಲ್ಲಿ ಮತ್ತೊಮ್ಮೆ ತುಮಕೂರಿಗೆ ಭೇಟಿ ನೀಡಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜನರಿಗೆ ಹೇಳಿದ್ದರು ಗಾಂಧೀಜಿಯವರು ತುಮಕೂರಿಗೆ ಭೇಟಿ ನೀಡಿ ತಂಗಿದ್ದ ಕೊಠಡಿಯನ್ನು ಪಾಲಿಕೆ ವತಿಯಿಂದ ಅಭಿವೃದ್ಧಿಪಡಿಸಲಾಗಿದೆ ಹಾಗೂ ಆ ಕೊಠಡಿ ಮುಂಭಾಗದಲ್ಲಿ ಗಾಂಧಿ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಮುಂದಿನ ಪೀಳಿಗೆಯ ಮಕ್ಕಳಿಗೆ ಗಾಂಧೀಜಿಯವರ ತತ್ವ ಆದರ್ಶಗಳನ್ನು ತಿಳಿಸಬೇಕು. ಆದ್ದರಿಂದ ಶಾಲಾ-ಕಾಲೇಜುಗಳಲ್ಲಿ ಅವರ ಭದ್ಧತೆ ಹಾಗೂ ಸಿದ್ದಾಂತಗಳನ್ನು ತಿಳಿಸಬೇಕು ಎಂದು ಹೇಳಿದರು.
ಶಾಸ್ತ್ರೀಜಿಯವರು ಅಂದು ಕ್ಷೀರಾಕ್ರಾಂತಿಯನ್ನು ಪ್ರಾರಂಭಿಸಿದ ಪರಿಣಾಮ, ಇಂದು ಭಾರತ ದೇಶವು ಇಡೀ ವಿಶ್ವದಲ್ಲಿಯೇ ಹಾಲು ಉತ್ಪಾದನೆಯಲ್ಲಿ ಮೊದಲನೇ ಸ್ಥಾನ ಪಡೆದಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರ ಶಾಸಕ ಜ್ಯೋತಿ ಗಣೇಶ್, ಮಹಾನಗರ ಪಾಲಿಕೆಯ ಮೇಯರ್ ಪ್ರಭಾವತಿ, ಉಪ ಮೇಯರ್ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಕೆ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಪಾಲಿಕೆ ಆಯುಕ್ತೆ ಅಶ್ವಿಜ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.