ಸುದ್ದಿಮೂಲ ವಾರ್ತೆ
ಬೆಂಗಳೂರು,ಅ.8: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರೆತಾಗ ಪ್ರಜಾಪ್ರಭುತ್ವ ಸಂಪೂರ್ಣ ಯಶಸ್ವಿಯಾಗುತ್ತದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿಂದು ಶಿವಾರ್ಚಕರ ಕ್ಷೇಮಾಭಿವೃದ್ಧಿ ಟ್ರಸ್ಟ್ ನ 4ನೇ ವಾರ್ಷಿಕೋತ್ಸವದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಶಿವಾರ್ಚಕ ಸಮುದಾಯದವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ತೀರಾ ಹಿಂದುಳಿದಿದ್ದರೂ, ಹಿಂದುಳಿದ ವರ್ಗಗಳ ಯಾವುದೇ ಆಯೋಗದ ವರದಿಯ ಜಾತಿಯ ಪಟ್ಟಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗಿಲ್ಲ ಎಂದು ನನಗೆ ತಿಳಿಸಲಾಗಿದೆ. ಈ ಸಮುದಾಯಕ್ಕೆ ನ್ಯಾಯ ಕೊಡಿಸಲು ಶ್ರಮಿಸುವುದಾಗಿ ತಿಳಿಸಿದರು.
ಶಿವಾರ್ಚಕರು ಮೂಲತಃ ಶಿವನನ್ನು ಪೂಜಿಸುವ ಸಮುದಾಯದವರಾಗಿದ್ದು, ವೀರಶೈವ ಲಿಂಗಾಯಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಮತ್ತು ಬಹಳ ಮಂದಿ, ಬಾಳೆ ಹೊನ್ನೂರು ರಂಬಾಪುರಿ ಪೀಠಕ್ಕೆ ನಡೆದುಕೊಳ್ಳುತ್ತಿದ್ದಾರೆ. ಈ ಸಮುದಾಯದ ಎಲ್ಲರಿಗೂ ಬರುವ ಡಿಸೆಂಬರ್ ನಲ್ಲಿ ನಡೆಯಲಿರುವ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾಧಿವೇಶನಕ್ಕೆ ಆಗಮಿಸುವಂತೆ ಆಹ್ವಾನಿಸುವುದಾಗಿ ಸಭಾದ ಮಹಾ ಪ್ರಧಾನ ಕಾರ್ಯದರ್ಶಿಗಳೂ ಆದ ಈಶ್ವರ ಖಂಡ್ರೆ ತಿಳಿಸಿದರು.
ಸಮಾರಂಭದಲ್ಲಿ ಶಿವಗಂಗೆಯ ಮೇಲಣ ಗವಿಸಿಂಹಾಸದ ಸಂಸ್ಥಾನ ಮಠದ ಶ್ರೀ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಟ್ರಸ್ಟ್ ನ ಅಧ್ಯಕ್ಷ ಪುಟ್ಟಬಸಪ್ಪ ಮತ್ತಿತರರು ಪಾಲ್ಗೊಂಡಿದ್ದರು.