ಸುದ್ದಿಮೂಲ ವಾರ್ತೆ
ಬೆಂಗಳೂರು, ಅ.30: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಎಲ್ಲ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞಾ ವಚನ ಬೋಧನೆ ಮಾಡಿದರು.
‘ಜಾಗೃತಿ ಅರಿವು ಸಪ್ತಾಹ-2023’ ಹಿನ್ನೆಲೆಯಲ್ಲಿ ಈ ಪ್ರತಿಜ್ಞಾ ವಚನ ಬೋಧನೆ ಮಾಡಲಾಯಿತು.
ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞಾ ವಚನ ಬೋಧನಾ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮ್ಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು, ನೌಕರರು ಉಪಸ್ಥಿತರರಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಪ್ರಮಾಣ ವಚನ ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಕೇಂದ್ರೀಯ ಜಾಗೃತ ಆಯೋಗ ದೇಶಾದ್ಯಂತ ಜಾಗೃತಿ ಅರಿವಿನ ಸಪ್ತಾಹವನ್ನು ಇಂದಿನಿಂದ ನವೆಂಬರ್ ೫ರ ವರೆಗೆ ಭ್ರಷ್ಟಾಚಾರವನ್ನು ವಿರೋಧಿಸಿ, ರಾಷ್ಟ್ರಕ್ಕೆ ಬದ್ಧರಾಗಿರಿ ನಿಷ್ಠೆಯ ಪ್ರತಿಜ್ಞೆ ಮಾಡಿ ಎಂದು ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.
ಜಾಗೃತಿ ಅರಿವು ಸಪ್ತಾಹ-2023 ಅಂಗವಾಗಿ ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭಷ್ಟಾಚಾರ ವಿರುದ್ಧ ಜಾಗೃತಿ ಮೂಡಿಸುವ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.