ಸುದ್ದಿಮೂಲ ವಾರ್ತೆ
ಮೈಸೂರು, ಅ.30:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ನಿವೇಶನಗಳನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿ ಪ್ರಾಧಿಕಾರಕ್ಕೆ, ಸರ್ಕಾರಕ್ಕೆ ಅಂದಾಜು 300ಕೋಟಿ ರೂ. ಹೆಚ್ಚು ಆರ್ಥಿಕ ನಷ್ಟ ಉಂಟು ಮಾಡಲಾಗಿದೆ. ಕೂಡಲೇ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಕೀಲ ರವಿ ಒತ್ತಾಯಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ವಿಶೇಷ ತಹಶೀಲ್ದಾರ್, ಹೆಚ್ಚುವರಿ ಜಿಲ್ಲಾ ನೊಂದಣಾಧಿಕಾರಿ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳು, ಹಾಗೂ ಸದಸ್ಯ, ಅಧಿಕಾರಿ, ನೌಕರುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಲೋಕಾಯುಕ್ತ, ಮುಖ್ಯಮಂತ್ರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದರು.