ಸುದ್ದಿಮೂಲ ವಾರ್ತೆ
ತುಮಕೂರು, ಅ.31: ರಾಜ್ಯ ಸರ್ಕಾರವು ಜನಸಾಮಾನ್ಯರಿಗಾಗಿ ಜಾರಿಗೊಳಿಸಿರುವ ಎಲ್ಲಾ ಇಲಾಖೆಗಳ ಎಲ್ಲಾ ಯೋಜನೆಗಳನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಕಾಲದಲ್ಲಿ ಸಮರ್ಪಕವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ನಿಟ್ಟಿನಲ್ಲಿ
ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಹುಲಿಯೂರಮ್ಮ ಸಭಾಂಗಣದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ತಾಲ್ಲೂಕುಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೊದಲಿಗೆ ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಕುಣಿಗಲ್ ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದಾಗಿ ರಾಗಿ ಮತ್ತು ಮುಸುಕಿನಜೋಳ ಬೆಳೆ ನಷ್ಟವಾಗಿದೆ. ತಾಲ್ಲೂಕಿನಾದ್ಯಂತ ಬೆಳೆ ಸಮೀಕ್ಷೆಯನ್ನು ಮಾಡಲಾಗಿದೆ. 600 ರೈತರು ತಾವು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಅವರಿಗೆ ಬೆಳೆ ನಷ್ಟದ ಮಧ್ಯಂತರ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು.
ತಾಲ್ಲೂಕಿನಲ್ಲಿರುವ 70ಸಾವಿರ ರೈತರ ಪೈಕಿ ಕೇವಲ 600 ರೈತರು ವಿಮೆಗಾಗಿ ನೋಂದಣಿ ಮಾಡಿರುತ್ತಾರೆ. ಉಳಿದ ರೈತರನ್ನು ವಿಮೆ ಮಾಡಿಸುವ ನಿಟ್ಟಿನಲ್ಲಿ ಅವರಿಗೆ ವಿಮೆ ಸೌಲಭ್ಯದ ಕುರಿತು ಅರಿವು ಮೂಡಿಸಬೇಕೆಂದು ಕೃಷಿ ಸಹಾಯಕ ನಿರ್ದೇಶಕರಿಗೆ ಗೃಹ ಸಚಿವರು ಸೂಚನೆ ನೀಡಿದರು.
ಕುಣಿಗಲ್ ತಾಲ್ಲೂಕಿನಲ್ಲಿ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಗ್ರಾಹಕರಿಗೆ ತೂಕದಲ್ಲಿ ವ್ಯತ್ಯಾಸವಾಗದ ರೀತಿಯಲ್ಲಿ ಅಕ್ಕಿಯನ್ನು ವಿತರಣೆ ಮಾಡಲು ಶಿರಸ್ತೇದಾರ್ ಅವರು ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದರು.
ವಸತಿ ಯೋಜನೆಯಡಿ 2015 ರಿಂದ 2022ರವರೆಗೆ ತಾಲ್ಲೂಕಿನಲ್ಲಿ ಸುಮಾರು 8000 ಮನೆಗಳು ಮಂಜೂರಾಗಿದ್ದು, ಇದರ ಪೈಕಿ ಇಲ್ಲಿಯವರೆಗೆ 772 ಮನೆಗಳ ಕಾಮಗಾರಿಯನ್ನು ಪ್ರಾರಂಭಿಸಿರುವುದಿಲ್ಲ.
ಮನೆ ಕಾಮಗಾರಿ ವಿಳಂಬ ಮಾಡಿರುವ ಫಲಾನುಭವಿಗಳ ಜೊತೆ ಚರ್ಚಿಸಿ ಶೀಘ್ರದಲ್ಲೇ ಮನೆ ಕಾಮಗಾರಿಯನ್ನು ಪ್ರಾರಂಭಿಸುವಂತೆ ತಿಳಿಸಬೇಕೆಂದು ಹೇಳಿದರು.
ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 52,780 ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವರ್ಗಾವಣೆ ಮಾಡಲಾಗಿದೆ. ಹಾಗೆಯೇ, ಗೃಹಜ್ಯೋತಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳದ ಗ್ರಾಹಕರು ಕೂಡಲೇ ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.
ಎಡೆಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ವೈದ್ಯರುಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆ ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕೆಂದು ಟಿಹೆಚ್ಓ ಅವರಿಗೆ ಸಚಿವರು ಸೂಚಿಸಿದರು.
ಆರೋಗ್ಯ ಇಲಾಖೆಯು ನವೆಂಬರ್ 3ರಂದು ಎನ್ಸಿಡಿ ಕಾರ್ಯಕ್ರಮದ ಅಭಿಯಾನವನ್ನು ಪ್ರಾರಂಭಿಸಲಾಗುವುದು. ಪ್ರತಿ ಮನೆಮನೆಗೆ ತೆರಳಿ 30 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು. ಇದರ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ತಿಳಿಸಿದರು.