ಸುದ್ದಿಮೂಲ ವಾರ್ತೆ
ತುಮಕೂರು,ನ.04 : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಅ. 27ರಂದು ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯನ್ವಯ 55,650 ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್ 27ರಂದು ಸಾರ್ವಜನಿಕರ ಮಾಹಿತಿಗಾಗಿ ಎಲ್ಲ 2615 ಮತಗಟ್ಟೆ ಹಾಗೂ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿ. 9ರವರೆಗೆ ಅವಕಾಶವಿರುತ್ತದೆ ಎಂದು ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.
ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 11,23,062 ಪುರುಷರು, 11,32,016 ಮಹಿಳೆಯರು ಹಾಗೂ 104 ಇತರೆ ಮತದಾರರು ಸೇರಿ ಒಟ್ಟು 22,55,182 ಮತದಾರರಿದ್ದು, ಇದರಲ್ಲಿ 30,572 ವಿಕಲಚೇತನ ಮತದಾರರು ಹಾಗೂ 100 ವರ್ಷ ಮೇಲ್ಪಟ್ಟ 707 ಶತಾಯುಷಿ ಮತದಾರರು ಒಳಗೊಂಡಿದ್ದಾರೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ 2023ರ ಜನವರಿ 5 ರಿಂದ ಅಕ್ಟೋಬರ್ 27ರವರೆಗೆ ಯಥಾ ನಕಲು ಆದ 15,511 ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಿದರಲ್ಲದೆ, ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಹೊನ್ನವಳ್ಳಿ ಹೋಬಳಿ ಹೊಸಪಟ್ಟಣ ಹಾಗೂ ನೊಣವಿನಕೆರೆ ಹೋಬಳಿ ಹೊನ್ನೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 2 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ ಮಾತನಾಡಿ, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ವೇಳಾಪಟ್ಟಿ, ಜಿಲ್ಲೆಯಲ್ಲಿರುವ ಮತದಾರರ ಮಾಹಿತಿ, ಮತಗಟ್ಟೆಗಳ ಸಂಖ್ಯೆ,ಮತ್ತಿತರ ಮಾಹಿತಿಯನ್ನು ಸಭೆಗೆ ನೀಡಿದರು.
ಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್, ಸಿಪಿಐಎಂ, ಅಮ್ ಆದ್ಮಿ ಪಕ್ಷದ ಮುಖಂಡರು ಸೇರಿದಂತೆ ಮತ್ತಿತರರು ಹಾಜರಿದ್ದರು.