ಸುದ್ದಿಮೂಲ ವಾರ್ತೆ
ತುಮಕೂರು, ನ.21 : ಜಿಲ್ಲೆಯ 10 ತಾಲೂಕುಗಳು ಬರಪೀಡಿತವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ತುರ್ತು ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲು 1 ಕೋಟಿ ರೂ.ಗಳ ಅನುದಾನ
ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಮಂಗಳವಾರ ನಡೆದ ಬರಪೀಡಿತ ತುರ್ತು ಕುಡಿಯುವ ನೀರು ಕಾಮಗಾರಿಗಳ ಕ್ರಿಯಾಯೋಜನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು, ಸಾರ್ವಜನಿಕರು ಸಲ್ಲಿಸುವ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಮಗ್ರ ವಿವರಗಳನ್ನು ಹೊಂದಿದ
ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಈ ವರದಿಯನ್ನಾಧರಿಸಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು
ಅಗತ್ಯಕ್ಕನುಗುಣವಾಗಿ ಕಾಮಗಾರಿಗಳ ಕ್ರಿಯಾ ಯೋಜನೆ ಅನುಷ್ಠಾನ ಮಾಡಿ ಕೈಗೊಂಡ ತುರ್ತು ಕಾಮಗಾರಿಗಳ ಅನುಷ್ಠಾನದ ಪ್ರಗತಿ ವರದಿಯನ್ನು ಸಲ್ಲಿಸಬೇಕು ಎಂದರು.
ಎಸ್. ರವೀಶ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಚಿಕ್ಕನಾಯಕನಹಳ್ಳಿ,
ಕುಣಿಗಲ್, ಕೊರಟಗೆರೆ, ಮಧುಗಿರಿ, ಗುಬ್ಬಿ, ಶಿರಾ, ಪಾವಗಡ, ತಿಪಟೂರು ಮತ್ತು ತುರುವೇಕೆರೆ ತಾಲ್ಲೂಕುಗಳು ತೀವ್ರ ಬರಪೀಡಿತ ಹಾಗೂ ತುಮಕೂರು ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಿದ್ದು, ಈ ತಾಲ್ಲೂಕುಗಳ ವಸತಿ ಪ್ರದೇಶಗಳಲ್ಲಿನ ನೀರಿನ ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗಿರುತ್ತದೆ. ಆದ್ದರಿಂದ 26.81 ಲಕ್ಷ ರೂ.ಗಳ ತುರ್ತು ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾಯೋಜನೆಯನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಆಡಳಿತ ಶಾಖೆ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಕೃಷಿ ಇಲಾಖೆ ಜಂಟಿನಿರ್ದೇಶಕ ಎನ್.ರಮೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ, ಜಿಲ್ಲಾ ಪಂಚಾಯತ್
ಅಭಿವೃದ್ಧಿ ಶಾಖೆಯ ವ್ಯವಸ್ಥಾಪಕರಾದ ಎನ್.ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.