ಬೆಂಗಳೂರು,ನ.23: ದೇಶದ ಭವಿಷ್ಯ ರೂಪಿಸಲು ಮಕ್ಕಳಿಗೆ ಅಗತ್ಯ ಶಿಕ್ಷಣ ಕೊಡಿಸುವುದರ ಜೊತೆಗೆ ಸದೃಢವಾಗಿ, ಬಲಿಷ್ಟರನ್ನಾಗಿ ಬೆಳಸಬೇಕು. ಇದು ಎಲ್ಲಾ ಪಾಲಕರ ಹಾಗೂ ಶಿಕ್ಷಕರ ಜವಬ್ದಾರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜವಾಹರ ಬಾಲಭವನದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮಕ್ಕಳಿಗೆ ಶೌರ್ಯ ಪ್ರಶಸ್ತಿ, ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯತ್ತಮ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳಿಗೆ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿ ಪ್ರಶಸ್ತಿ ಪಡೆದ ಎಲ್ಲಾ ಮಕ್ಕಳಿಗೆ, ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳಿಗೆ ಅಭಿನಂದನೆ ಸಲ್ಲಿಸಿದರು.
ಮಕ್ಕಳು ತಮ್ಮ ಶಿಕ್ಷಣದ ಜೊತೆ ಜೊತೆಗೆ ಕ್ರೀಡೆ, ಸಾಹಸ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಯಾವುದೇ ಅಡೆ – ತಡೆ ಬಂದರೂ ಎದುರಿಸುವಂತಹ ಎದೆಗಾರಿಕೆ ಬೆಳೆಸಿಕೊಳ್ಳಬೇಕು. ಮಕ್ಕಳ ಶಿಕ್ಷಣಕ್ಕಾಗಿ ಮತ್ತು ಭವಿಷ್ಯಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳನ್ನು ಎಲ್ಲರೂ ಸರಿಯಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬಾಲಭವನದಿಂದ ಹಮ್ಮಿಕೊಳ್ಳಲಾದ ಚಿತ್ರ ಕಲೆ, ಸಂಗೀತ, ಜಾನಪದ ಇನ್ನಿತರೆ ಕ್ಷೇತ್ರಗಳಲ್ಲಿ ಪ್ರಶಸ್ತಿಗಳಿಸಿದ ವಿದ್ಯಾರ್ಥಿಗಳಿಗೆ “ಕಲಾಶ್ರೀ ಪ್ರಶಸ್ತಿ” ಪ್ರದಾನ ಮಾಡಿದರು. ನಂತರ “ಬಾಲಮಂದಿರ ಕಥಾ ಚಂದಿರ” ಪುಸ್ತಕವನ್ನು ಬಿಡುಗಡೆ ಮಾಡುವುದರ ಜೊತೆಗೆ ಅಂಗನವಾಡಿ ಕಾರ್ಯಕರ್ತರ ಹಾಗೂ ಸಹಾಯಕರ ನೇಮಕಾತಿಗಾಗಿ ರೂಪಿಸಲಾದ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಜಿ.ಸಿ. ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಕೆಯ ನಿರ್ದೇಶಕರಾದ ಶ್ರೀಮತಿ ಅರ್ಚನಾ ಎಂ.ಎಸ್. ಮಹಿಳ ಅಭಿವೃದ್ಧಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪುಷ್ಪಲತಾ, ಬಾಲಭವನದ ಕಾರ್ಯದರ್ಶಿ ನಿಶ್ಚಲ್ ಸೇರಿದಂತೆ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.