ಬೆಂಗಳೂರು, ಸೆ.12: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.
ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಮುಖ್ಯ ಪರೀಕ್ಷೆಗೆ ಮತ್ತು ಪಿಎಸ್ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲ ಪರೀಕ್ಷೆ ಮುಂದೂಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸೆ.22ರಂದು ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಿ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ ಆ ದಿನವೂ ಯುಪಿಎಸ್ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಒಂದೆರಡು ದಿನಗಳಲ್ಲಿ ಸೂಕ್ತವಾದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಪೊಲೀಸ್ ಪೇದೆ ನೇಮಕಾತಿಗೆ ವಯೋಮಿತಿ ಹೆಚ್ಚಳದ ಕುರಿತು ಬೇರೆ ರಾಜ್ಯಗಳಿಂದ ಮಾಹಿತಿ ಕಲೆ ಹಾಕಿದ್ದೇವೆ. ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ, ವರದಿಯನ್ನು ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.