ಸುದ್ದಿಮೂಲ ವಾರ್ತೆ,
ಮೈಸೂರು, ಸೆ.14:ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಕುರಿತು ಮೈಸೂರು ಸೇರಿದಂತೆ ಆನೇಕ ಕಡೆ ಪ್ರತಿಭಟನೆ ಮುಂದುವರಿದಿದೆ. ಆದರೆ, ಗುರುವಾರ ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವುದಿಲ್ಲ ಎಂಬ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ ಎಂದು ಆರೋಪಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯಿಂದ ಗುರುವಾರ ರಸ್ತೆತಡೆ ನಡೆಸಲಾಯಿತು.
ನಗರದ ಸರ್ಎಂವಿ ಪ್ರತಿಮೆ ಎದುರು ಸಮಿತಿ ನೇತೃತ್ವದಲ್ಲಿ ಧರಣಿ ನಡೆಸುತ್ತಿರುವ ರೈತ, ಪ್ರಗತಿಪರ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ತಮಿಳುನಾಡಿಗೆ ನೀರು ಬಿಡುವುದಿಲ್ಲವೆಂದು ಸರಕಾರ ಹೋರಾಟಗಾರರಿಗೆ ಸ್ಪಷ್ಟಪಡಿಸಿತ್ತು. ಆದರೆ, ಸರ್ವಪಕ್ಷ ಸಭೆಯಲ್ಲಿ ನೀರು ಬಿಡದಿರುವ ನಿರ್ಧಾರಕ್ಕೆ ಬದಲು, ಕಾನೂನು ತಜ್ಞರ ಜತೆ ಚರ್ಚಿಸಿ ತೀರ್ಮಾನಕ್ಕೆ ಬಂದಿರುವುದು ರೈತರಿಗೆ ಬಗೆದ ದ್ರೋಹವಾಗಿದೆ ಎಂದು ಅವರು ಕಿಡಿಕಾರಿದರು.
ರಾಜ್ಯ ಸರಕಾರ ನಿಲುವು ಗೊಂದಲಮಯವಾಗಿದ್ದು, ಅನುಮಾನ ಮೂಡಿಸಿದೆ. ತಮಿಳುನಾಡಿಗೆ ನೀರು ಹರಿಸುವ ಹುನ್ನಾರವಾಗಿದೆ. ಒಂದು ವೇಳೆ ನೀರು ಹರಿಸಿದರೆ ಮುಂದಿನ ಪರಿಣಾಮಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಕೆಆರ್ಎಸ್ನಲ್ಲಿರುವ ನೀರು ಕುಡಿಯಲು ಸಾಕಾಗುವುದಿಲ್ಲ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿ ಸೆ.21ರಂದು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ವಿವರಿಸಿ ರಾಜ್ಯದ ಜನರ ಹಿತ ಕಾಪಾಡಬೇಕು. ರಾಜ್ಯದ ಸಂಸದರು, ಶಾಸಕರು ಮತ್ತು ಕಾವೇರಿ ನೀರು ಕುಡಿಯುತ್ತಿರುವ ಬೆಂಗಳೂರು, ಮೈಸೂರಿನ ನಾಗರಿಕರು ಹೋರಾಟದಲ್ಲಿ ಭಾಗವಹಿಸಬೇಕು ಎಂದು ಪ್ರತಿಭಟನಾಕಾರರು ತಾಕೀತು ಮಾಡಿದರು.
ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ರೈತಸಂಘದ ಮುಖಂಡರಾದ ಸುನಂದಾ ಜಯರಾಂ, ಕೆ.ಬೋರಯ್ಯ, ಇಂಡವಾಳು ಚಂದ್ರಶೇಖರ್, ಮುದ್ದೇಗೌಡ, ಕೀಲಾರ ಕೃಷ್ಣ, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಕನ್ನಡಸೇನೆ ಜಿಲ್ಲಾಧ್ಯಕ್ಷ ಎಚ್.ಎಸ್.ಮಂಜುನಾಥ್, ದಲಿತ ಮುಖಂಡ ಎಂ.ವಿಕೃಷ್ಣ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.