ಸುದ್ದಿಮೂಲ ವಾರ್ತೆ
ಬೆಂಗಳೂರು, ಆ.8: ರಾಯಚೂರು ಜಿಲ್ಲೆಯಲ್ಲಿ ಸಚಿವ ಮತ್ತು ಶಾಸಕರ ಮಧ್ಯೆ ಇರುವ ಭಿನ್ನಾಭಿಪ್ರಾಯವನ್ನು ಸರಿಪಡಿಸಿ ಪುನಃ ತಮ್ಮಲ್ಲಿ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರಿಗೆ ಜವಾಬ್ದಾರಿ ವಹಿಸಿದ್ದಾರೆ.
ಇಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸಮಕ್ಷಮ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಜಿಲ್ಲೆಯ ಕಾಂಗ್ರೆಸ್ನಲ್ಲಿರುವ ಭಿನ್ನಮತದ ಕುರಿತು ಪ್ರಸ್ತಾಪವಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕಿರುವುದರಿಂದ ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ ಎಂದು ಗೊತ್ತಾಗಿದೆ.
ಚುನಾವಣಾ ಪೂರ್ವ ಮತ್ತು ನಂತರದ ಏನೇ ಭಿನ್ನಾಭಿಪ್ರಾಯಗಳಿದ್ದರೂ ಅದು ಇಲ್ಲಿಗೆ ಕೊನೆಗೊಳ್ಳಬೇಕು. ಈ ಬಗ್ಗೆ ಜಿಲ್ಲೆಯ ಸಚಿವ, ಶಾಸಕರೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಿ ಪುನಃ ತಮ್ಮ ಬಳಿ ಬರುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮತ್ತು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರಿಗೆ ಸೂಚನೆ ನೀಡಿದ್ದಾರ ಎಂದು ಹೇಳಲಾಗಿದೆ.
ಲೋಕಸಭೆಗೆ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬುದುರ ಕುರಿತು ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಸಚಿವರು ಮತ್ತು ಶಾಸಕರ ಅಭಿಪ್ರಾಯ ಸಂಗ್ರಹಿಸಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ತಮಗೆ ತಿಳಿಸುವಂತೆ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ ರಾಯಚೂರಿನ ಸಚಿವ, ಶಾಸಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ರಾಯಚೂರು ಲೋಕಸಭಾ ವ್ಯಾಪ್ತಿಗೆ ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಯ ಕ್ಷೇತ್ರಗಳೂ ಒಳಪಡುತ್ತಿದ್ದು ಈ ಸಂಬಂಧ ಕೊಪ್ಪಳ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಹಾಗೂ ಲೋಕಸಭಾ ವ್ಯಾಪ್ತಿಯ ಸಚಿವರೊಂದಿಗೂ ಸಹ ಸಮಾಲೋಚನೆ ನಡೆಸಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಉಳಿದಂತೆ ವರ್ಗಾವಣೆಗೆ ಸಂಬಂಧಪಟ್ಟಂತೆ ಆಯಾ ಕ್ಷೇತ್ರದ ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯ ಅಧಿಕಾರಿಗಳ ವರ್ಗಾವಣೆಗೆ ಮಾತ್ರ ಶಿಫಾರಸು ಮಾಡಬೇಕು. ಉಳಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವರ್ಗಾವಣೆ ಮಾಡುವಾಗ ಆಯಾ ಜಿಲ್ಲೆಯಲ್ಲಿರುವ ಸಚಿವರ ಮತ್ತು ಶಾಸಕರ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ಅಧಿಕಾರಿಯನ್ನು ಸೂಚಿಸಬೇಕು ಎಂದು ಹೇಳಿದ ಮುಖ್ಯಮಂತ್ರಿ ಈಗಾಗಲೇ ಸೂಚಿಸಿದ ಅಧಿಕಾರಿಗಳ ವರ್ಗಾವಣೆ ಆಗದಿದ್ದಲ್ಲಿ ಮತ್ತು ಅದಕ್ಕೆ ಸ್ಪಂದಿಸದ ಸಚಿವರ ಮಾಹಿತಿ ನೀಡಿದಲ್ಲಿ ಅದನ್ನು ಸರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧ ಚಟುವಟಿಕೆ ನಡೆಸಿದವರು ಯಾರೇ ಇದ್ದರೂ ಮತ್ತು ಅವರು ಯಾವುದೇ ಬಣಕ್ಕ ಸೇರಿದವರಾಗಿರಲಿ ಅಂತವರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೈಜ ಕಾರ್ಯಕರ್ತರಿಗೆ ಸಮಸ್ಯೆಯಾಗುತ್ತದೆ ಎಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಗಮನಕ್ಕೆ ತಂದಿರುವುದಾಗಿ ತಿಳಿದುಬಂದಿದೆ.
ಸಭೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ದದ್ದಲ್, ಹಂಪಯ್ಯ ನಾಯಕ್, ಹಂಪನಗೌಡ ಬಾದರ್ಲಿ, ಬಸನಗೌಡ ತುರ್ವಿಹಾಳ ಮತ್ತು ಶರಣಗೌಡ ಬಯ್ಯಾಪುರ, ಜಿಲ್ಲೆಯ ಅಭಿವೃದ್ಧಿ ಮತ್ತು ರಾಜಕೀಯ ವಿಷಯದಲ್ಲಿ ಇರುವ ಗೊಂದಲಗಳು ನಿವಾರಣೆಯಾಗಬೇಕು. ಈಗಿನ ಪರಿಸ್ಥಿತಿಯಲ್ಲಿ ಮುಂದುವರಿದರೆ ಲೋಕಸಭಾ ಚುನಾವಣೆಯಲ್ಲಿ ಸಮಸ್ಯೆಯಾಗಲಿದೆ. ಇದನ್ನು ಮುಖ್ಯಮಂತ್ರಿಗಳೇ ನೇತೃತ್ವವಹಿಸಿ ಸರಿಪಡಿಸುವಂತೆ ಕೋರಿದ್ದರು ಎನ್ನಲಾಗಿದೆ.