ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ,ನ.06: ವಾಯುಮಾಲಿನ್ಯ ತಡೆಗಟ್ಟಲು ಸಾರ್ವಜನಿಕರು ಹೆಚ್ಚು ಹೆಚ್ಚು ಗಿಡ ಮರಗಳನ್ನು ಬೆಳೆಸಬೇಕು. ಜೊತೆಗೆ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಲು ಜಿಲ್ಲಾ ಪರಿಸರ ಅಧಿಕಾರಿ ಸಿದ್ದೇಶ್ವರಪ್ಪ ಮನವಿ ಮಾಡಿದರು.
ಸೋಮವಾರ ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಆಯೋಜಿಸಿದ್ದ, ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಯು ಮಾಲಿನ್ಯವನ್ನು ತಡೆಗಟ್ಟಲು ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದ್ದು, ವಿದ್ಯುತ್ ಚಾಲಿತ ವಾಹನಗಳಿಗೆ ಸರ್ಕಾರವು ಸಬ್ಸಿಡಿ ಕೂಡ ನೀಡುತ್ತಿದೆ. ವಿದ್ಯುತ್ ಚಾಲಿತ ವಾಹನಗಳನ್ನು ಬಳಕೆ ಮಾಡುವುದರಿಂದ ವಾಯು ಮಾಲಿನ್ಯವನ್ನು ನಿಯಂತ್ರಿಸಬಹುದಾಗಿದ್ದು, ಸಾರ್ವಜನಿಕರು ವಿದ್ಯುತ್ ಚಾಲಿತ ವಾಹನಗಳ ಬಳಕೆಯತ್ತ ಒಲವು ತೋರಬೇಕು ಎಂದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಎ.ವಿ.ವಿವೇಕನಂದ ಮಾತನಾಡಿ, ಸಾರ್ವಜನಿಕರು ತಮ್ಮ ವಾಹನಗಳನ್ನು ಪ್ರತ್ರಿ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮಾಲಿನ್ಯ ತಪಾಸಣೆ ಮಾಡಿಸಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು ಹಾಗೂ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟು ಕೊಂಡು ವಾಯುಮಾಲಿನ್ಯ ನಿಯಂತ್ರಣಕ್ಕೆ ಸಹಕರಿಸಬೇಕು. ವಾಯು ಮಾಲಿನ್ಯ ನಿಯಂತ್ರಿಸಲು ಮಾಲಿನ್ಯ ರಹಿತ ವಾಹನಗಳನ್ನು ಬಳಕೆ ಮಾಡುವುದು ಉತ್ತಮ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ವಿಜೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ಇತರೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.