ಸುದ್ದಿಮೂಲ ವಾರ್ತೆ
ಬೆಂಗಳೂರು,ಮಾ.27: ಕಾಂಗ್ರೆಸ್ ಪಕ್ಷ ಬಡವರು, ಶೋಷಿತರ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಟೀಕಿಸಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಸ್ಸಿ, ಎಸ್ಟಿ, ಒಬಿಸಿ ಸೇರಿದಂತೆ ವಿವಿಧ ಸಮುದಾಯಕ್ಕೆ ನ್ಯಾಯ ಕೊಡುವ ಮಾತನಾಡುವ ಬಿಜೆಪಿ ಅದನ್ನೇ ಅನುಷ್ಠಾನಕ್ಕೆ ತಂದಿದೆ. ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಈಡೇರಿಸಿದೆ. ಎಸ್ಸಿ, ಎಸ್ಟಿ ಸಮುದಾಯಗಳ ಮೀಸಲಾತಿಯನ್ನು ಅದು ಹೆಚ್ಚಿಸಿದೆ. ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್ ಪಕ್ಷ ಅದನ್ನು ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು.
ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷವನ್ನೂ ಕ್ಷಮಿಸುವುದಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷದವರಿಗೆ ಚುನಾವಣೆಗೆ ಸಂಬಂಧಿಸಿ ಯಾವುದೇ ವಿಚಾರಗಳಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನತೆಗೆ ಏನು ಕೊಟ್ಟಿದ್ದಾರೆ ಎಂದು ಸವಾಲು ಹಾಕಿದರು.
ಅವರು ಏನೂ ಮಾಡಲೇ ಇಲ್ಲ. ಅದಕ್ಕಾಗಿಯೇ ಅವರು ಮೌನವಾಗಿದ್ದಾರೆ. ಸಿದ್ದರಾಮಯ್ಯ ಸರಕಾರ ಇದ್ದಾಗ ಕೇವಲ ತುಷ್ಟೀಕರಣ ನಡೆಯುತ್ತಿತ್ತು. ಆಗ ಭ್ರಷ್ಟಾಚಾರ ಗರಿಷ್ಠ ಪ್ರಮಾಣದಲ್ಲಿತ್ತು ಎಂದು ಆರೋಪಿಸಿದರು.
ಸಿದ್ದರಾಮಯ್ಯ ತಮ್ಮ ಸಾಧನೆಗಳನ್ನು ಜನರ ಮುಂದಿಡಬೇಕು. ಆಗ ನಾವು ಕೂಡ ನಮ್ಮ ಸಾಧನೆಗಳನ್ನು ಜನರ ಮುಂದಿಡಲು ಸಿದ್ಧರಿದ್ದೇವೆ ಎಂದು ಅವರು ಸವಾಲು ಹಾಕಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣ ಮತ್ತಿತರರು ಇದ್ದರು.