ಸುದ್ದಿಮೂಲ ವಾರ್ತೆ
ಬೆಂಗಳೂರು, ಮಾ.24: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ಹಬ್ಬದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮೇಳಗಳನ್ನು ಮಾರ್ಚ್ 25ರಂದು ಬೆಳಗ್ಗೆ 9.30 ರಿಂದ ಸಂಜೆ 6 ರವರೆಗೆ ಕಬ್ಬನ್ ಪಾರ್ಕ್ ಆವರಣದ ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ.
ರಾಜ್ಯದ ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆಗಳನ್ನು ಬೆಂಗಳೂರಿನಲ್ಲಿ ನೆಲೆಸಿರುವ ಇತರೆ ಭಾಷಿಕರನ್ನು ಒಳಗೊಂಡಂತೆ, ನಾಡಿನ ಜನರಿಗೆ ಪರಿಚಯಿಸುವ ದೃಷ್ಟಿಯಿಂದ ಬೆಂಗಳೂರು ಹಬ್ಬ ಆಚರಿಸಲಾಗಿದೆ.
ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದ ವೇದಿಕೆಯಲ್ಲಿ ಸಂಜೆ 6.30 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ನಂತರ ಹೆಸರಾಂತ ಸಂಗೀತಗಾರರಿಂದ ಗಾಯನ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಲಿದ್ದು, ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ.ಸುನಿಲ್ಕುಮಾರ್, ಇತರೆ ಸಚಿವರು ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಮಾರ್ಚ್ 26 ರಂದು ಸಂಜೆ 5.00 ಗಂಟೆಗೆ ವಿಧಾನಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಹಾಗೂ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿದ ನಂತರ, ನಾಡಿನ ಪ್ರಸಿದ್ಧ ಸಂಗೀತಗಾರರು ಹಾಗೂ ನೃತ್ಯ ಪಟುಗಳಿಂದ ಗಾಯನ ಹಾಗೂ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.