ಸುದ್ದಿಮೂಲ ವಾರ್ತೆ
ಬೆಂಗಳೂರು,ಸೆ.25: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ 225 ವಾರ್ಡ್ಗಳನ್ನು ಅಂತಿಮಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಮೂಲಕ ಬಿಬಿಎಂಪಿಗೆ ಚುನಾವಣೆ ನಡೆಸುವ ಕಾಲ ಸನ್ನಿಹಿತವಾಗಿದ್ದು, ಡಿಸೆಂಬರ್ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಲಾಗುತ್ತಿದೆ.
ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸ್ಸುಗಳನ್ನು ಸರ್ಕಾರವು ಒಪ್ಪಿಕೊಂಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿನಿಯಮ, 2020ರ ಕಲಂ 7ರಲ್ಲಿ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡ್ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಾಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡುಗಳ ಸಂಖ್ಯೆ 225ಕ್ಕೆ ಅಂತಿಮಗೊಳಿಸಲಾಗಿದೆ. ಪ್ರತಿ ವಾರ್ಡಿನ ಸಂಖ್ಯೆ ಮತ್ತು ವಾರ್ಡುಗಳ ಹೆಸರು ಮತ್ತು ಪ್ರತಿ ವಾರ್ಡುಗಳ ವ್ಯಾಪ್ತಿಯ ಗಡಿಗಳ ಚೆಕ್ಕುಬಂದಿಯ ವಿವರಗಳನ್ನು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.
ಪ್ರಸ್ತುತ ಬಿಬಿಎಂಪಿ ಸದಸ್ಯರ ಅಧಿಕಾರಾವಧಿ 2020ರ ಸೆಪ್ಟೆಂಬರ್ನಲ್ಲಿಯೇ ಮುಗಿದಿದೆ. ಅಲ್ಲಿಂದ ಇಲ್ಲಿಯವರೆಗೂ ಅಂದರೆ ಮೂರು ವರ್ಷ ಬಿಬಿಎಂಪಿಗೆ ಚುನಾವಣೆಯನ್ನೇ ನಡೆಸಿಲ್ಲ. ಈ ಹಿಂದೆ 198 ವಾರ್ಡ್ಗಳಿಗೆ ಚುನಾವಣೆ ನಡೆಯುತ್ತಿತ್ತು. ಈಗ ಅದು 225ಕ್ಕೆ ಹೆಚ್ಚಳ ಮಾಡಲಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವರಾದ ರಾಮಲಿಂಗಾರೆಡ್ಡಿ ಅವರು, ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದು ಎಂದು ಈ ಹಿಂದೆ ಪ್ರಕಟಿಸಿದ್ದರು. ಅದರಂತೆ ಲೋಕಸಭಾ ಚುನಾವಣೆಗೂ ಮುನ್ನವೇ ಬಿಬಿಎಂಪಿಗೆ ಚುನಾವಣೆ ನಡೆದು ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಪ್ರಾರಂಭವಾಗುವ ನಿರೀಕ್ಷೆ ಇದೆ.