ಸುದ್ದಿಮೂಲ ವಾರ್ತೆ
ಮಡಿಕೇರಿ, ಅ.16: ಮಡಿಕೇರಿ ತಾಲ್ಲೂಕಿನ ಕರ್ಣಂಗೇರಿ ಬಳಿ ಗುರುತಿಸಲಾಗಿರುವ 7 ಎಕರೆ ಜಾಗದಲ್ಲಿ ‘ವಿಜ್ಞಾನ ಉಪ ಪ್ರಾದೇಶಿಕ ಕೇಂದ್ರʼದ ನಿರ್ಮಾಣಕ್ಕೆ ನವೆಂಬರ್ 01 ರಂದು ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಹೇಳಿದರು.
ಸೋಮವಾರಪೇಟೆಯ ಕೊಡವ ಸಮಾಜದಲ್ಲಿ ಸೋಮವಾರ ನಡೆದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿಜ್ಞಾನ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಈಗಾಗಲೇ 3 ಕೋಟಿ ರೂ. ಬಿಡುಗಡೆಯಾಗಿದ್ದು, ಇನ್ನಷ್ಟು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಎನ್.ಎಸ್. ಭೋಸರಾಜು ಅವರು ಹೇಳಿದರು. ಸರ್ಕಾರ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಹೆಚ್ಚಿನ ಅನುದಾನ ನಿಗದಿ ಮಾಡಿದೆ. ಆ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಸಚಿವರು ವಿವರಿಸಿದರು.
ಆಡಳಿತವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಬೇಕು ಎಂಬ ಉದ್ದೇಶದಿಂದ ಸರ್ಕಾರ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಅವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು. ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತಾಗಬೇಕು ಎಂದು ಸಚಿವರು ಸಲಹೆ ಮಾಡಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಸಾರ್ವಜನಿಕರಿಗೆ ಆಗಬೇಕಿರುವ ಕೆಲಸಗಳು ಸಾಕಷ್ಟು ಇದ್ದು, ಅವುಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು. ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಗಳು ಸಾರ್ವಜನಿಕರಿಗೆ ಹತ್ತಿರವಾದ ಇಲಾಖೆಗಳಾಗಿದ್ದು, ಗ್ರಾಮೀಣ ಬಡ ಜನರ ಕಲ್ಯಾಣಕ್ಕೆ ಮತ್ತಷ್ಟು ಸ್ಪಂದಿಸುವಂತಾಗಬೇಕು ಎಂದು ತಿಳಿಸಿದರು. ಸೆಸ್ಕ್ ಇಲಾಖೆ ವ್ಯಾಪ್ತಿಯಲ್ಲಿ ಸಿಬ್ಬಂದಿಗಳ ಕೊರತೆಯಿದ್ದು, ಸಿಬ್ಬಂದಿಗಳನ್ನು ನಿಯೋಜಿಸುವಂತಾಗಬೇಕು. ಹಾಗೆಯೇ ಕೃಷಿ ಪಂಪ್ಸೆಟ್ಗಳ 10 ಎಚ್ಪಿವರೆಗೆ ಉಚಿತ ವಿದ್ಯುತ್ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಇಲ್ಲಿನ ಬಡವರು ಮನೆ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದಾರೆ. ಇವರನ್ನು ತೆರವುಗೊಳಿಸಲು ಅರಣ್ಯ ಇಲಾಖೆಯವರು ಮುಂದಾಗುತ್ತಾರೆ. ಇದು ಸರಿಯೇ ಎಂಬುದನ್ನು ಯೋಚಿಸಬೇಕು. ಆದ್ದರಿಂದ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಬಡವರಿಗೆ ಆಶ್ರಯ ಕಲ್ಪಿಸಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತಗತಿಯಲ್ಲಿ ನಿಯಮಾನುಸಾರ ಪರಿಹರಿಸಲಾಗುವುದು. ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಶ್ರಮಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಎಸ್.ಎನ್.ನರಗುಂದ, ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ, ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಇದ್ದರು.