ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.13: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳ ಜೊತೆ ಸಭೆ ನಡೆಸಿರುವುದು ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ಮತ್ತು ಜೆಡಿಎಸ್ ಇದನ್ನು ಖಂಡಿಸಿವೆ.
ಕಳೆದ ರಾತ್ರಿ ಖಾಸಗಿ ಹೋಟೆಲ್ನಲ್ಲಿ ಡಿ.ಕೆ. ಶಿವಕುಮಾರ್ ಪಕ್ಕದಲ್ಲಿ ಕುಳಿತು ರಣದೀಪ್ ಸಿಂಗ್ ಸುರ್ಜೇವಾಲ, ಬಿಡಿಎ ಅಧ್ಯಕ್ಷ ಹಾಗೂ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರೊಂದಿಗೆ ಸಭೆ ನಡೆಸಿದ್ದು ವಿವಾದಕ್ಕೆ ಕಾರಣವಾಗಿದೆ.
ಬಿಬಿಎಂಪಿಯಲ್ಲಿ ಬಹುತೇಕ ಎರಡು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ, ಆಡಳಿತಾಧಿಕಾರಿಗಳಿಂದಲೇ ಪಾಲಿಕೆ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟಬಹುಮತ ಬಂದಿದ್ದು, ಬಿಬಿಎಂಪಿ ಚುನಾವಣೆ ಬಗ್ಗೆ ಆಸಕ್ತಿ ವಹಿಸಿದೆ. ಆದರೆ, ಪಾಲಿಕೆ ಮರುವಿಂಗಡಣೆ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವುದರಿಂದ ಸರ್ಕಾರ ಯಾವ ನಿಟ್ಟಿನಲ್ಲಿ ಹೆಜ್ಜೆ ಇಟ್ಟು ನ್ಯಾಯಾಲಯ ಅನುಮತಿ ಪಡೆಯುವ ಮೂಲಕ ಚುನಾವಣೆ ನಡೆಸಬೇಕು ಎಂಬ ಆಕಾಂಕ್ಷೆ ಹೊಂದಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಪಾಲಿಕೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು ಎಂದು ಹೇಳಲಾಗುತ್ತಿದೆ.
ಏತನ್ಮಧ್ಯೆ, ಬಿಬಿಎಂಪಿಯನ್ನು ವಿಭಜಿಸಲು ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್. ಪಾಟೀಲ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪುನಾರಚಿಸಲಾಗಿದ್ದು, ಪಾಲಿಕೆಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದ್ದು, ಇದು ಅಧಿಕೃತವೋ, ಅನಧಿಕೃತವೊ ಎಂಬ ಪ್ರಶ್ನೆ ಇದ್ದಿದೆ.
ರಣದೀಪ್ ಸಿಂಗ್ ಸುರ್ಜೇವಾಲ ಯಾವ ಅರ್ಹತೆ ಮೇಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂಬುದು ಸ್ಪಷ್ಟಪಡಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಆಗ್ರಹಿಸಿದೆ.
ಗಾಂಧಿ ಕುಟುಂಬದ ನಿಯಂತ್ರಣ:
ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆ ಕರ್ನಾಟಕದ ಮೇಲೆ ಗಾಂಧಿ ಕುಟುಂಬದ ನಿಯಂತ್ರಣ ಸಾಧಿಸಲು ಹೊರಟಿರುವುದನ್ನು ತೋರಿಸುತ್ತಿದೆ ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿದೆ.
ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕದ ಆಡಳಿತದ ಮೇಲೆ ಯಾವ ಹಿಡಿತ ಹೊಂದಿದ್ದಾರೆ? ಬಿಬಿಎಂಪಿ-ಬಿಡಿಎ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಇವರಿಗೆ ಏನು ಅಧಿಕಾರ ಇದೆ? ಇದು 85 ಪರ್ಸೆಂಟ್ ಡೀಲ್ ಸರ್ಕಾರ ಆಗುತ್ತಿದೆ. 2024ರ ಲೋಕಸಭಾ ಚುನಾವಣೆಗೆ ಹಣ ಸಂಗ್ರಹಿಸಲು ‘ಎಟಿಎಂ ಸರ್ಕಾರ’ ಪ್ರಯತ್ನಿಸುತ್ತಿದೆಯೇ? ಎಂದು ಟ್ವೀಟ್ ಮಾಡಿದೆ.
ದಿಲ್ಲಿ ಹಂಗಿನ ಸರ್ಕಾರ:
ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.
ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.