ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 14: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಗಳಿಸುತ್ತಿದ್ದಂತೆ ಬಸವರಾಜ ಬೊಮ್ಮಾಯಿ ಅವರು ಶನಿವಾರ ರಾತ್ರಿ ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶಿಗ್ಗಾಂವಿಯಲ್ಲಿ ಇದ್ದ ಬಸವರಾಜ ಬೊಮ್ಮಾಯಿ ಅವರು ಸಂಜೆ ಹುಬ್ಬಳ್ಳಿ ಮೂಲಕ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಬಳಿಕ ರಾತ್ರಿ 9.30ರ ಸುಮಾರಿಗೆ ರಾಜಭವನಕ್ಕೆ ಬಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಯಡಿಯೂರಪ್ಪ ಅವರ ರಾಜೀನಾಮೆ ತರುವಾಯ 2021ರ ಜುಲೈ 28ರಂದು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 1 ವರ್ಷ 289 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಿದ ಬೊಮ್ಮಾಯಿ ಅವರು ಬಿಜೆಪಿ ಸೋಲಿನಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದು, ಸೋಮವಾರ ಕಾಂಗ್ರೆಸ್ ಮುಖ್ಯಮಂತ್ರಿಯೊಬ್ಬರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.