ಬೆಂಗಳೂರು,ಸೆ.21: ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮತ್ತು ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.
ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆಗಿನ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರ ಸಚಿವರಿಗೆ ಸಮರ್ಥವಾಗಿ ತಿಳಿಸಿದ್ದೇವೆ. ಅವರ ಸ್ಪಂದನೆ ಸಕಾರಾತ್ಮಕವಾಗಿತ್ತು. ಸುಪ್ರೀಂಕೋರ್ಟ್ ನಲ್ಲೂ ನಮ್ಮ ಮನವಿ ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿ CWMC ಆದೇಶಕ್ಕೆ ತಡೆಯಾಜ್ಞೆ ನೀಡುವ ಭರವಸೆ ಇದೆ. ಹೀಗಾಗಿ ನಾವು ಸುಪ್ರೀಂಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಬಳಿಕ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ವಿವರಿಸಿದರು.
ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ.
ಗೋಷ್ಠಿಯ ಇತರೆ ಹೈಲೈಟ್ಸ್
ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ . ಆದರೆ ನಮ್ಮ ನಾಲ್ಕೂ ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ.
123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದು ಜಲಾಶಯಗಳ ಒಳ ಹರಿವು ಇಲ್ಲವಾಗಿದೆ ಎಂದು ಸಚಿವರ ಗಮನ ಸೆಳೆದಿದ್ದೇವೆ.
ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂದೂ ಹೇಳಿದ್ದೇವೆ
ಸುಪ್ರೀಂಕೋರ್ಟ್ ಗೂ ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ನಮ್ಮ ಲೀಗಲ್ ತಂಡ ಮನವರಿಕೆ ಮಾಡಿಸಲು ಯತ್ನಿಸುತ್ತಿದೆ ನಾಲ್ಕೂ ಜಲಾಶಯಗಳ ಒಳ ಹರಿವು 11 ರಿಂದ 8 ಕ್ಯೂಸೆಕ್ಸ್ ಗೆ ಇಳಿದಿದೆ.
ಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕೃಷಿ ಸಚಿವ ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸಂಸದ ಡಿ.ಕೆ.ಸುರೇಶ್ ಮುಂತಾದವರು ಉಪಸ್ಥಿತರಿದ್ದರು.