ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 25: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ಗೆ ಹೀನಾಯ ಸೋಲು ಉಂಟಾಗಿರುವ ಹಿನ್ನೆಲೆಯಲ್ಲಿ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬುಧವಾರ ಸಂಜೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಆದರೆ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಇನ್ನೂ ಅಂಗೀಕರಿಸಿಲ್ಲ.
ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಸಿ.ಎಂ. ಇಬ್ರಾಹಿಂ ಅವರು, ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಹೀಗಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.
ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ವಿರೋಧಿ ಅಲೆ ಇತ್ತು. ಜನರು ಕಾಂಗ್ರೆಸ್ಗೆ ಬಹುಮತ ನೀಡಿದ್ದಾರೆ. ನಮ್ಮದು ಹಣಬಲ, ತೋಳ್ಬಲ ಇಲ್ಲದ ಪಕ್ಷ ಎಂದು ಹೇಳಿದರು.
ಮುಂದೆ ಶೀಘ್ರದಲ್ಲಿಯೇ ಬಿಬಿಎಂಪಿ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಗಳು ಎದುರಾಗುತ್ತವೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಇಬ್ರಾಹಿಂ ಹೇಳಿದರು.
ಇಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ:
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸಿಕ್ಕಿದ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಸಭೆ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯೂ ಗುರುವಾರ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದಲ್ಲಿ ಮಾಡಬೇಕಿರುವ ಬದಲಾವಣೆಗಳು ಹಾಗೂ ತರಬೇಕಿರುವ ಸುಧಾರಣೆಗಳ ಬಗ್ಗೆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಯಲಿದೆ. ಇದರಲ್ಲಿ ಯಾವ ಮುಚ್ಚುಮರೆ ಇಲ್ಲ. ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದೆವು. ಪಂಚರತ್ನ ರಥಯಾತ್ರೆಗೂ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದರು. ಆದರೆ, ಫಲಿತಾಂಶ ನಮಗೆ ಅತೀವ ನಿರಾಶೆ ಉಂಟು ಮಾಡಿದೆ ಎಂದರು ಅವರು.
ಆತ್ಮಾವಲೋಕನ ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಲ್ಲಿ ವಿಶ್ವಾಸದ ಕೊರತೆ ಇದೆ. ಯುವಕರಿಗೆ, ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಕೊಡಬೇಕು ಎಂಬ ಉದ್ದೇಶ ಇದೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಕೆಲವು ಮಹತ್ವದ ಬದಲಾವಣೆ ಮಾಡಲಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ನವೆಂಬರ್ ನಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ನಾನು ರಾಜಕೀಯದಲ್ಲಿ ಬೆಳವಣಿಗೆಗಳು ಆಗುತ್ತವೆ ಎಂದಿದ್ದೆ ಅಷ್ಟೇ. ಸರ್ಕಾರ ಹೋಗುತ್ತೆ ಅಂತಾ ಹೇಳಿದ್ದೆನಾ? ಎಂದು ಮರು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ನೂತನ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.