ಚಿಕ್ಕಬಳ್ಳಾಪುರ, ಮೇ 24: ಮುಂಗಾರು ಸದ್ಯದಲ್ಲಿಯೇ ಆರಂಭವಾಗಲಿದ್ದು, ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನ್ನದ್ದರಾಗಿರುವಂತೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಮುಂಗಾರು ಅವಧಿಯಲ್ಲಿ ಹೆಚ್ಚಿನ ಮಳೆ ಉಂಟಾದಲ್ಲಿ ಸಂಭವಿಸಬಹುದಾದ ಅವಘಡಗಳನ್ನು ಎದುರಿಸಲು ಹಾಗೂ ಹಾನಿಯನ್ನು ತಗ್ಗಿಸಲು ತೆಗೆದುಕೊಳ್ಳಬೇಕಾದ ಪೂರ್ವ ಸಿದ್ಧತೆಗಳು, ತುರ್ತು ಸಂದರ್ಭಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅರಣ್ಯ ಇಲಾಖೆಯಿಂದ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬೀಳುವ ಮರಗಳನ್ನು ಕೂಡಲೇ ತೆರವುಗೊಳಿಸಲು ಅಗತ್ಯವಿರುವ ಎಲ್ಲಾ ಯಂತ್ರೋಪಕರಣಗಳನ್ನು ಮತ್ತು ಸಿಬ್ಬಂದಿಯನ್ನು ಸನ್ನದ್ದ ಸ್ಥಿತಿಯಲ್ಲಿರುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾದಂತಹ ರೋಗಗಳು ಹರಡದಂತೆ ಎಚ್ಚರ ವಹಿಸಿ ಈ ಬಗ್ಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸೂಚನೆ ನೀಡುವಂತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಮತೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೇ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್ ಅವರು ಮಾತನಾಡಿ ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗಿದೆಯೆಂದು ಮಾಹಿತಿ ನೀಡಿದರು.
ಅಗ್ನಿ ಶಾಮಕದಳ ತುರ್ತು ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲು ಅಗತ್ಯ ಸುರಕ್ಷಾ ಉಪಕರಣಗಳೊಂದಿಗೆ ಸನ್ನದ್ದರಾಗಿರುವಂತೆ ಗೃಹ ರಕ್ಷಕದಳ ಸಿಬ್ಬಂದಿಗಳು ಸಹ ತುರ್ತು ಸೇವೆಗೆ ಲಭ್ಯವಿರುವಂತೆ ಕ್ರಮಕೈಗೊಳ್ಳಬೇಕು ಹಾಗು ವಿದ್ಯುತ್ ವ್ಯತ್ಯಯ ಉಂಟಾದಲ್ಲಿ ಕೂಡಲೇ ಸರಿಪಡಿಸಬೇಕು. ವಿದ್ಯುತ್ ತಂತಿಗಳು ಜೋತು ಬಿದ್ದಿರುವುದು ಕಂಡು ಬಂದಲ್ಲಿ ಕೂಡಲೇ ಸರಿಪಡಿಸಿ ವಿದ್ಯುತ್ ತಂತಿಯಿಂದ ಯಾವುದೇ ಜೀವ ಹಾನಿಯಾಗದಂತೆ ಎಚ್ಚರವಹಿಸಬೇಕೆಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಮಳೆ ಪ್ರವಾಹ ಸಂದರ್ಭದಲ್ಲಿ ಏನೇ ತೊಂದರೆಯಾದಲ್ಲಿ ಕೂಡಲೇ ಘಟನಾ ಸ್ಥಳಕ್ಕೆ ಹೋಗಬೇಕು. ಜೀವ, ಆಸ್ತಿ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಮಳೆಯಿಂದಾಗಿ ಗಿಡ-ಮರಗಳು ವಿದ್ಯುತ್ ತಂತಿಗಳ ಮೇಲೆ ಉರುಳಿ ವಿದ್ಯುತ್ ಕಡಿತದಿಂದ ಕುಡಿಯುವ ನೀರಿಗೆ ತೊಂದರೆಯಂತಹ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಕಂದಾಯ, ಅರಣ್ಯ, ಮೆಸ್ಕಾಂ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳ ಮಧ್ಯೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ರವರು ಹೇಳಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವುದು ಹಾಗೂ ಸೂಕ್ಷ್ಮ ಪ್ರದೇಶದಲ್ಲಿನ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಳೆಯಿಂದ ಜೀವಹಾನಿ, ಜಾನುವಾರು ಹಾನಿಯಾದಲ್ಲಿ ಕೂಡಲೇ ವರದಿ ನೀಡಿ ಪರಿಹಾರ ವಿತರಿಸುವಂತೆ ಎಲ್ಲಾ ತಹಸೀಲ್ದಾರ್ ರಿಗೆ ಮತ್ತು ಬೆಳೆ ಹಾನಿ ಸಂಭವಿಸಿದ್ದಲ್ಲಿ ಕೃಷಿ ಮತ್ತು ತೋಟಕಾರಿಗೆ ಇಲಾಖೆ ಸೂಕ್ತ ರೀತಿಯಲ್ಲಿ ಅಂದಾಜು ನಷ್ಟದ ವರದಿಯನ್ನು ಸಿದ್ದಪಡಿಸಿ ಸಲ್ಲಿಸುವಂತೆ ಸೂಚಿಸಿದರು. ಜಿಲ್ಲೆಯ ಶಾಲಾ ಕೊಠಡಿಗಳು ದುರಸ್ತಿ ಇದ್ದರೆ ಆದಷ್ಟು ಶೀಘ್ರವಾಗಿ ಸರಿಪಡಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.