ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ,ಸೆ.5: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೊಳಿಸುವುದೇ ನನ್ನ ಮುಖ್ಯ ಗುರಿ ಎಂದು ಶಾಸಕ ಮೇಲೂರು ರವಿಕುಮಾರ್ ಹೇಳಿದರು.
ತಾಲೂಕಿನ ಹಂಡಿಗನಾಳ ಸಮೀಪದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಭಾರತ ರತ್ನ ಡಾ. ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯದ 36 ಇಲಾಖೆಗಳಲ್ಲಿ ಯಾವುದಾದರೂ ಒಂದು ಇಲಾಖೆ ಭ್ರಷ್ಟಾಚಾರದಿಂದ ಮುಕ್ತವಾಗಿದೆ ಎಂದರೆ ಅದು ಶಿಕ್ಷಣ ಇಲಾಖೆ ಎಂದರು. ಕ್ಷೇತ್ರದಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಮತ್ತು ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಪ್ರಥಮ ಆದ್ಯತೆ ನೀಡಲಾಗುವುದು. ತಮ್ಮ ಕಾಲಾವಧಿಯಲ್ಲಿ ಶಿಕ್ಷಕರಿಗೆ ಅನುಕೂಲ ಕಲ್ಪಿಸಲು ಸುಸಜ್ಜಿತ ಗುರುಭವನ ಮತ್ತು ಸರ್ಕಾರಿ ನೌಕರರ ಭವನವನ್ನು ನಿರ್ಮಾಣ ಮಾಡಿ ಲೋಕಾರ್ಪಣೆ ಮಾಡುವುದಾಗಿ ಭರವಸೆ ನೀಡಿದರು.
ಕ್ಷೇತ್ರದ 360 ಹಳ್ಳಿಯಲ್ಲಿ ಶೇಕಡ 72ರಷ್ಟು ಜನ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಪೂರ್ವ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ಪೋಷಕರಿಗೆ ಮನವರಿಕೆ ಮಾಡುವ ಮೂಲಕ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿ ಗತವೈಭವವನ್ನು ಮರಿಕಳಿಸಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಶಿಕ್ಷಕರು ನಡೆಸಿಕೊಟ್ಟ ಲಂಬಾಣಿ ನೃತ್ಯ ಆಕರ್ಷಣೀಯವಾಗಿತ್ತು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಶಿಕ್ಷಕರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್.ನರೇಶ್, ತಹಶೀಲ್ದಾರ್ ಬಿ.ಎನ್.ಸ್ವಾಮಿ, ತಾಪಂ ಇಓ ಜಿ.ಮುನಿರಾಜ್, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯ ಮೇಲೂರು ಮಂಜುನಾಥ್, ಜಿಪಂ ಮಾಜಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ಭೂ ಅಭಿವೃಧ್ಧಿ ಬ್ಯಾಂಕಿನ ಅಧ್ಯಕ್ಷ ನಾರಾಯಣಸ್ವಾಮಿ, ನಗರಸಭೆಯ ಮಾಜಿ ಅಧ್ಯಕ್ಷ ಜೆವಿ ಸದಾಶಿವ, ತಾಪಂ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿರಾಜು, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.