ಸುದ್ದಿಮೂಲ ವಾರ್ತೆ
ತುಮಕೂರು, ಸೆ.26: ಜಿಲ್ಲೆಯಲ್ಲಿ ಆಶ್ರಯ ಯೋಜನೆಗೆ 761 ಎಕರೆ ಜಾಗವನ್ನು ಗುರುತಿಸಿ ಸರ್ವೇಯನ್ನು ಮಾಡಲಾಗಿದ್ದು, ಈ ಜಾಗವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ತಮ್ಮ ಸುಪರ್ದಿಗೆ ತೆಗೆದುಕೊಂಡು ನರೇಗಾ ಯೋಜನೆಯ ಅನುದಾನವನ್ನು ಬಳಸಿಕೊಂಡು ವಸತಿ ಬಡಾವಣೆ ನಿರ್ಮಾಣ ಮಾಡುವುದಕ್ಕೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದರು. ತುಮಕೂರು ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಕಾರ್ಯಕ್ರಮಕ್ಕೆ ಅ. 2ರಂದು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ನಿವೇಶನ ರಹಿತರಿಗೆ ನಿವೇಶನಗಳನ್ನು ಕೊಟ್ಟರೆ ಅವರು ಸರ್ಕಾರದ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಂಡು ನೆಮ್ಮದಿಯಿಂದ ಜೀವನ ನಡೆಸಲು ಅನುಕೂಲವಾಗುತ್ತದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಕೇಂದ್ರದಿಂದ 2ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಉದ್ಯಾನವನ ನಿರ್ಮಿಸಲು ಕಂದಾಯ ನಿರೀಕ್ಷಕರುಗಳು ಜಾಗವನ್ನು ಗುರುತಿಸಬೇಕು. ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉದ್ಯಾನವನ ನಿರ್ಮಾಣ ಮಾಡಿದರೆ ಸಾರ್ವಜನಿಕರಿಗೆ ಪ್ರತಿನಿತ್ಯ ವಾಯು ವಿಹಾರಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಜನತಾ ದರ್ಶನ ಕಾರ್ಯಕ್ರಮದಲ್ಲಿ 819 ಅರ್ಜಿಗಳು ಸ್ವೀಕೃತಿಯಾಗಿದ್ದು, ಅದರಲ್ಲಿ ಶೇ. 50ರಷ್ಟು ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಬಂದಿವೆ. ಎಲ್ಲಾ ಅರ್ಜಿಗಳನ್ನು ಆಯಾ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ವಿಲೇವಾರಿ ಮಾಡಲಾಗುವುದು. ಕಂದಾಯ ಇಲಾಖೆಗೆ ಸಂಬAಧಿಸಿದ ಕಡತಗಳನ್ನು ಈ ಆಫೀಸ್ ಮೂಲಕವೇ ವಿಲೇವಾರಿ ಮಾಡಬೇಕು. ಕಡತಗಳನ್ನು ಭೌತಿಕವಾಗಿ ವಿಲೇವಾರಿ ಮಾಡಬಾರದು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ಗೌರವ್ಕುಮಾರ್ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ಜಿಲ್ಲಾಧಿಕಾರಿ ಕಚೇರಿಯ ಸಹಾಯಕರಾದ ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.