ಸುದ್ದಿಮೂಲ ವಾರ್ತೆ
ತುಮಕೂರು, ಅ.26 : ಬಾಲ್ಯ ವಿವಾಹದಿಂದ ಮಕ್ಕಳು ತಮ್ಮ ಹಕ್ಕುಗಳನ್ನು ಅನುಭವಿಸುವ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಾರೆ. ಮಕ್ಕಳು ದೌರ್ಜನ್ಯಕ್ಕೆ ಒಳಗಾಗುವುದಲ್ಲದೆ, ತಾಯಿ-ಶಿಶು ಮರಣ ಹಾಗೂ ಅಪೌಷ್ಟಿಕ ಮಕ್ಕಳ ಜನನಕ್ಕೂ ಸಹ ಈ ಸಾಮಾಜಿಕ ಪಿಡುಗು ಕಾರಣವಾಗಲಿದೆ.
ಆದ್ದರಿಂದ ವಿದ್ಯಾರ್ಥಿಗಳು ಬಾಲ್ಯ ವಿವಾಹ ಎಂಬ ಪಿಡುಗಿನ ಸುಳಿಗೆ ಸಿಗದೆ ಉತ್ತಮವಾದ ಶಿಕ್ಷಣವನ್ನು ಪಡೆಯುವುದರ ಮೂಲಕ ತಮ್ಮ ಮುಂದಿನ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಮತ್ತು ಜಿಲ್ಲಾ ವಕೀಲರ ಸಂಘ ತುಮಕೂರು ಇವರ ಸಹಯೋಗದಲ್ಲಿ ನಗರದ ಜಿಲ್ಲಾ ನಗರ ಗ್ರಂಥಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯವಿವಾಹ ಮುಕ್ತ ಕರ್ನಾಟಕ ಅಭಿಯಾನ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 18 ವರ್ಷದೊಳಗಿನ ಮಕ್ಕಳಿಗೆ ಪೋಷಕರು ಮದುವೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಮಾಹಿತಿ ತಿಳಿದ ಕೂಡಲೇ ಸಹಾಯ ವಾಣಿ ಸಂಖ್ಯೆ 1098 ಮತ್ತು 112 ಕ್ಕೆ ಕರೆ ಮಾಡಿ ಮಾಹಿತಿಯನ್ನು ನೀಡಬೇಕು. ಆಗಅಧಿಕಾರಿಗಳು ಮಧ್ಯ ಪ್ರವೇಶಿಸಿ ಮದುವೆಯನ್ನು ನಿಲ್ಲಿಸುತ್ತಾರೆ ಎಂದರಲ್ಲದೆ, ಜಿಲ್ಲೆಯಲ್ಲಿ ಇಲ್ಲಿಯವರೆಗೆ 21 ಬಾಲ್ಯವಿವಾಹಗಳನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಕೆ.ಬಿ.ಗೀತಾ ಮಾತನಾಡಿ, ಬಾಲ್ಯಾವಸ್ಥೆಯಲ್ಲಿರುವ ಮಕ್ಕಳಿಗೆ ತಮ್ಮ ಮುಂದಿನ ಜೀವನದ ಬಗ್ಗೆ ತಿಳಿದಿರುವುದಿಲ್ಲ. ಅಂತಹ 18 ವರ್ಷದೊಳಗಿನ ಮಕ್ಕಳಿಗೆ ಬಾಲ್ಯ ವಿವಾಹ ಮಾಡಿದರೆ ಅಂತಹವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಳ್ಳುವುದರ ಮೂಲಕ ಅವರಿಗೆ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಹೇಳಿದರು.
ತಮ್ಮ ಗ್ರಾಮಗಳಲ್ಲಿ ನಡೆಯುವ ಬಾಲ್ಯವಿವಾಹಗಳ ಮಾಹಿತಿಯನ್ನು ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ತಿಳಿಸಬೇಕು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ತೆರಳಿ ಬಾಲ್ಯ ವಿವಾಹ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ನಿಮಗೆ ಏನೇ ಸಮಸ್ಯೆ ಆದರೂ ನ್ಯಾಯಾಲಯ ಸದಾ ನಿಮ್ಮ ಜೊತೆ ಇರುತ್ತದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಮಾತನಾಡಿ, ವಿದ್ಯಾರ್ಥಿಗಳು ಮೊದಲು ತಮ್ಮ ಮನೆಯ ಹಿರಿಯರಿಗೆ ಬಾಲ್ಯ ವಿವಾಹದ ಬಗ್ಗೆ ಅರಿವು ಮೂಡಿಸಬೇಕು. ನಿಮ್ಮ ಗ್ರಾಮಗಳಲ್ಲಿ ಬಾಲ್ಯವಿವಾಹಗಳು ನಡೆಯುತ್ತಿರುವುದು ಗೊತ್ತಾದರೆ ನಮಗೆ ಮಾಹಿತಿ ನೀಡಿ ಅಥವಾ ಸಹಾಯವಾಣಿಗೆ ಕರೆ ಮಾಡಿ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನುಷಾ ಅವರು, ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ, ಉಪನಿರ್ದೇಶಕ ಎಂ.ಎಸ್.ಶ್ರೀಧರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಂಗಧಾಮಯ್ಯ ಉಪಸ್ಥಿತರಿದ್ದರು.