ಸುದ್ದಿಮೂಲ ವಾರ್ತೆ
ಬೆಂಗಳೂರು,ಅ.21:ಅಧಿಕಾರ ಹಂಚಿಕೆ, ಬೆಂಬಲ ಹಾಗೂ ಇತರೆ ವಿಚಾರಗಳ ಬಗ್ಗೆ ಯಾವುದೇ ಶಾಸಕರು ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದು ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.
ಗಾಂಧಿ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸಿದರು.
ಶಿವಕುಮಾರ್ ಒಬ್ಬರೇ ಪಕ್ಷ ಅಧಿಕಾರಕ್ಕೆ ತಂದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿರುವ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯಿಸಿದರು.
“ಪಕ್ಷ ಹಾಗೂ ಸರ್ಕಾರದ ಆಂತರಿಕ ವಿಚಾರಗಳು ಏನೇ ಇದ್ದರೂ ಶಾಸಕರು ಮುಖ್ಯಮಂತ್ರಿಗಳು ಹಾಗೂ ನನ್ನ ಬಳಿ ಚರ್ಚೆ ಮಾಡಬಹುದು. ಆದರೆ ಯಾವುದೇ ಕಾರಣಕ್ಕೂ ಮಾಧ್ಯಮಗಳ ಮುಂದೆ ಮಾತನಾಡಬಾರದು” ಎಂದರು.
“ಪಕ್ಷದ ಕಾರ್ಯಕರ್ತರು, ನಾವು, ನೀವು, ರಾಜ್ಯದ ಜನರು ಸೇರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿದ್ದಾನೆ ಎಂದು ಇಂದು, ನಾಳೆ, ಮುಂದೆ, ಯಾವತ್ತಿಗೂ ಹೇಳುವುದಿಲ್ಲ” ಎಂದರು.
ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಹೇಳಿದ್ದಾರಲ್ಲ ಎಂದು ಕೇಳಿದಾಗ, “ಪಕ್ಷದಲ್ಲಿ ಆಂತರಿಕವಾಗಿ ಒಂದಷ್ಟು ವಿಚಾರಗಳು ಚರ್ಚೆಯಾಗಿರುತ್ತವೆ. ಅದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಅದನ್ನು ಚರ್ಚೆ ಮಾಡಲು ನಾನು ಹೋಗುವುದಿಲ್ಲ, ನನಗೆ ಇರುವ ಮಾಹಿತಿ ಪ್ರಕಾರ ಆ ರೀತಿ ಚರ್ಚೆ ನಡೆದಿಲ್ಲ” ಎಂದು ಹೇಳಿದರು.